ADVERTISEMENT

ಆರ್‌ಸಿಯು: ಉಚಿತ ಲ್ಯಾಪ್‌ಟಾಪ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 10:28 IST
Last Updated 19 ಸೆಪ್ಟೆಂಬರ್ 2020, 10:28 IST
ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಚಾಲನೆ ನೀಡಿದರು
ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಚಾಲನೆ ನೀಡಿದರು   

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ವಿತರಿಸಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ, ‘ದಶಮಾನೋತ್ಸವದ ಸಂಭ್ರಮದಲ್ಲಿರುವ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹೊಸ ವಿಭಾಗಗಳ ಆರಂಭ, ವಿಚಾರಸಂಕಿರಣ ಹಾಗೂ ಕಮ್ಮಟಗಳನ್ನು ಆಯೋಜಿಸಲಾಗುತ್ತದೆ’ ಎಂದರು.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಎಸ್ಪಿ ಲಕ್ಷ್ಮಣ ನಿಂಬರಗಿ, ಕುಲಸಚಿವ ಬಸವರಾಜ ಪದ್ಮಸಾಲಿ ಇದ್ದರು.

ADVERTISEMENT

ಎರಡೂ ಕಡೆ ಕ್ಯಾಂಪಸ್

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಕುಲಪತಿ, ‘ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿ ಬಳಿ ಜಮೀನನ್ನು ಸರ್ಕಾರ ಒದಗಿಸಿದೆ. ಭೂತರಾಮನಟ್ಟಿ ಮತ್ತು ಹಿರೇಬಾಗೇವಾಡಿ ಎರಡೂ ಕಡೆ ಕ್ಯಾಂಪಸ್‍ಗಳು ಇರುತ್ತವೆ. ನಾವು 126 ಎಕರೆ ಜಾಗಕ್ಕೆ ಮನವಿ ಮಾಡಿದ್ದೆವು. ಜಾಗ ಕೊಡುವ ಸಂಬಂಧ ಈಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜಮೀನು ಕೊಡಲು ರೈತರು ಕೂಡ ಮುಂದೆ ಬಂದಿದ್ದಾರೆ. ಹೀಗಾಗಿ ಸರ್ಕಾರ ಎಷ್ಟು ಜಾಗ ಕೊಡುತ್ತದೆ ಎನ್ನುವುದನ್ನು ನೋಡಬೇಕಾಗಿದೆ’ ಎಂದು ತಿಳಿಸಿದರು.

‘ಹೊಸ ವಿಭಾಗಗಳು ಹಾಗೂ ಕೌಶಲಕ್ಕೆ ಸಂಬಂಧಿಸಿದ ಕೋರ್ಸ್‍ಗಳನ್ನು ಹಿರೇಬಾಗೇವಾಡಿಯಲ್ಲಿ ಆರಂಭಿಸಲಾಗುವುದು. ಕ್ರೀಡಾ ಸಮುಚ್ಚಯ, ಮೈದಾನ, ರಂಗಮಂದಿರ ಮೊದಲಾದವುಗಳ ನಿರ್ಮಾಣಕ್ಕೆ ಜಾಗ ದೊರೆತ ನಂತರ ಕ್ರಮ ವಹಿಸಲಾಗುವುದು’ ಎಂದರು.

‘ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಒಂದು ಅಥವಾ ಎರಡು ವಿಷಯಗಳಲ್ಲಿ ಫೇಲ್ ಆದವರಿಗೆ ಪದವಿ ಪೂರ್ಣಗೊಳಿಸಲು ‘ಗೋಲ್ಡನ್ ಚಾನ್ಸ್‌’ ಕೊಡಲಾಗುವುದು. ದಶಮಾನೋತ್ಸವ ಅಂಗವಾಗಿ ಈ ಅವಕಾಶ ನೀಡಲಾಗುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.