ಬೆಳಗಾವಿ: ‘ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಯಶಸ್ವಿಯಾಗಿ ನಡೆಸಿದ್ದೆವು. ಈಗ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ‘ಗಾಂಧಿ ಭಾರತ್’ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ವರ್ಷವಿಡೀ ಕಾರ್ಯಕ್ರಮ ನಡೆಸುತ್ತಿದ್ದೇವೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರ ನಡೆಯಲಿವೆ. ಇದಕ್ಕಾಗಿ ಕಾಂಗ್ರೆಸ್‌ನ ಜನಪರ ಕಾರ್ಯಕ್ರಮಗಳನ್ನು ಪ್ರಚುರಪಡಿಸಬೇಕಿದೆ. ತಾಲ್ಲೂಕು, ಬ್ಲಾಕ್ ಮಾತ್ರವಲ್ಲ; ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಪ್ರಚಾರ ಸಮಿತಿಗೆ ಸಮಿತಿಗೆ ಸದಸ್ಯರನ್ನು ನೇಮಿಸಿಕೊಳ್ಳಲಾಗುತ್ತಿದೆ’ ಎಂದರು.
‘ಚುನಾವಣೆ ಆಯೋಗವನ್ನು ಬಿಜೆಪಿ ತನ್ನ ಕೈಗೊಂಬೆಯಾಗಿಸಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ತಂಡದ ಮೂಲಕ ಸಮೀಕ್ಷೆ ನಡೆಸಿ, ಮತ ಕಳ್ಳತನದ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಬಿಜೆಪಿಯವರು ಚುನಾವಣೆ ಆಯೋಗದ ದುರ್ಬಳಕೆ ಮಾಡಿಕೊಳ್ಳುತ್ತಿರುವ ಧೋರಣೆ ಖಂಡಿಸಿ ಕೈಗೊಳ್ಳಲಿರುವ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಆ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು.
‘ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಯೋಜನೆಗಳೆಂದು ಬಿಜೆಪಿಯವರು ಟೀಕಿಸಿದ್ದರು. ಆದರೆ, ಇಂದು ಅದೇ ಗ್ಯಾರಂಟಿ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನರು ಗ್ಯಾರಂಟಿಗಳನ್ನು ಕೊಂಡಾಡುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.