ADVERTISEMENT

ಹೋರಾಟದಲ್ಲಿ ಮಡಿದವರ ಕುಟುಂಬದವರಿಗೆ ಪರಿಹಾರ ನೀಡಿ

ರೈತ ಸೇನಾ ಕರ್ನಾಟಕದಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 13:58 IST
Last Updated 13 ಡಿಸೆಂಬರ್ 2018, 13:58 IST

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಹೋರಾಟದಲ್ಲಿ ಮಡಿದವರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸೇನಾ ಕರ್ನಾಟಕದ ಮುಖಂಡರು ಗುರುವಾರ ಸುವರ್ಣ ವಿಧಾನಸೌಧ ಬಳಿ ಧರಣಿ ನಡೆಸಿದರು.

‘ನ್ಯಾಯಮಂಡಳಿಯ ತೀರ್ಪಿನ ಪ್ರಕಾರ ರಾಜ್ಯದ ಪಾಲಿನ ನೀರನ್ನು ಬಳಸಿಕೊಳ್ಳುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು. ಕೈಗೊಂಡಿರುವ ಕಾಮಗಾರಿಗಳ ಕುರಿತ ಮಾಹಿತಿಯನ್ನು ನೀಡಬೇಕು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳನ್ನು ಶೀಘ್ರವಾಗಿ ದುರಸ್ತಿ ಮಾಡಬೇಕು. ಏಕೆಂದರೆ, ಬಹಳಷ್ಟು ನೀರು ಒಡೆದ ಕಾಲುವೆಗಳ ಮೂಲಕ ಪೋಲಾಗಿ ಬೆಣ್ಣೆಹಳ್ಳಕ್ಕೆ ಸೇರುತ್ತದೆ. ಪೋಲಾದ ನೀರನ್ನು ರೈತರಿಗೆ ಬಳಸಿಕೊಳ್ಳಲು ಯೋಜನೆಯೊಂದನ್ನು ತಯಾರಿಸಬೇಕು. ನೀರನ್ನು ವಿನಾಕಾರಣ ಪೋಲು ಮಾಡುವವರ ವಿರುದ್ಧ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಮಹದಾಯಿ ಹೋರಾಟದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ಮನವಿ ನೀಡುವಂತೆ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಇದು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಅತಂತ್ರವಾಗಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಟ್ಟು ನೆರವಾಗಬೇಕು’ ಎಂದು ಆಗ್ರಹಿಸಿದರು.

ADVERTISEMENT

ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ, ಮುಖಂಡರಾದ ಶಿವಪ್ಪ ಹೊರಕೇರಿ, ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.