ಗೋಕಾಕ: ಇಲ್ಲಿನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳಿ ಮತ್ತು ಉಪಾಧ್ಯಕ್ಷರಾಗಿ ಬಸವರಾಜ ಆರೆನ್ನವರ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಎರಡು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಈಚೆಗೆ ಅವರು ಜಾರಕಿಹೊಳಿ ಸಹೋದರರ ಗುಂಪುಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಇದರೊಂದಿಗೆ ಈ ಸ್ಥಳೀಯ ಸಂಸ್ಥೆಯು ಇದೇ ಮೊದಲಿಗೆ ಬಿಜೆಪಿ ಬೆಂಬಲಿತರ ಪಾಲಾಗಿದೆ.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 15ನೇ ವಾರ್ಡ್‌ನ ಜಯಾನಂದ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 25ನೇ ವಾರ್ಡ್‌ನ ಬಸವರಾಜ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿಯಾಗಿಯಾಗಿದ್ದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದರು.
ನಂತರ ಮಾತನಾಡಿದ ಅಧ್ಯಕ್ಷ, ‘ಸಚಿವರ ಮಾರ್ಗದರ್ಶನದಲ್ಲಿ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇವೆ’ ಎಂದರು.
ದಿನಾಂಕ ಘೋಷಣೆಯಾದಾಗಿನಿಂದ ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ, ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು ಸೂಚಕರಾಗಿದ್ದು ಗಮನಸೆಳೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.