ADVERTISEMENT

‘ಸರ್ಕಾರಿ ನೌಕರರಿಗೆ ಒಪಿಎಸ್‌ ಜಾರಿಗೆ ಪ್ರಯತ್ನ’

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2025, 15:03 IST
Last Updated 13 ಜುಲೈ 2025, 15:03 IST
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಾಧಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಾಧಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಬೆಳಗಾವಿ: ‘2006ರ ಏಪ್ರಿಲ್‌ 1ರ ನಂತರ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್‌) ಬದಲಿಗೆ, ಹಳೇ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಭಾನುವಾರ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರಿಗೆ ಒಪಿಎಸ್‌ ಜಾರಿಯಾಗುವವರೆಗೂ ಹೋರಾಟ ಮುಂದುವರಿಯಲಿದೆ. ಇದೇ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಯಲಿದೆ’ ಎಂದರು. 

ADVERTISEMENT

‘ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮೆರೆಯುವ ಜತೆಗೆ, ಉತ್ತಮ ಸಂಸ್ಕಾರವನ್ನೂ ಪಡೆಯಬೇಕು. ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ರಂಗಗಳಲ್ಲಿ ತಮ್ಮ ಜ್ಞಾನ ಬಳಸಬೇಕು’ ಎಂದು ಕರೆಕೊಟ್ಟರು.

ಶಾಸಕ ಆಸಿಫ್‌ ಸೇಠ್‌, ‘ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಬೇಕು’ ಎಂದರು. 

ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ‘ಇದು ಪೈಪೋಟಿ ಯುಗ. ವಿದ್ಯಾರ್ಥಿಗಳು ಉತ್ತಮ ಗುರಿ ಹೊಂದಿ, ಅದನ್ನು ಸಾಕಾರಗೊಳಿಸಲು ನಿರಂತರವಾಗಿ ಪ್ರಯತ್ನಿಸಬೇಕು. ತಮ್ಮ ಬಳಿ ಇರುವ ಜ್ಞಾನವನ್ನು ಒಂದೇ ಕ್ಷೇತ್ರಕ್ಕೆ ಬಳಸಿದರೆ ಸಾಲದು. ಎಲ್ಲ ಕ್ಷೇತ್ರಗಳಲ್ಲೂ ಅದು ಸದ್ಬಳಕೆಯಾಗಬೇಕು’ ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಬೈಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ‘ಸರ್ಕಾರಿ ನೌಕರರ ಹಿತ ಕಾಪಾಡುವ ನಿಟ್ಟಿನಲ್ಲಿ ಸಿ.ಎಸ್‌.ಷಡಾಕ್ಷರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಸಂಘವನ್ನು ಪ್ರಗತಿಯತ್ತ ಕೊಂಡೊಯ್ಯುವ ಶಕ್ತಿ ಅವರಲ್ಲಿದೆ’ ಎಂದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಸಾಧನೆಗೈದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರಾಯವ್ವಗೋಳ, ಶಂಕರ ಗೋಕಾವಿ, ಬಿ.ಎ. ಕುಂಬಾರ, ಗಿರಿಗೌಡ ಎಚ್., ವಿ.ವಿ.ಶಿವರುದ್ರಯ್ಯ, ಮಲ್ಲಿಕಾರ್ಜುನ ಬಳ್ಳಾರಿ, ಸುರೇಶ ಶೆಡಶ್ಯಾಳ, ಆಸಿಫ್ ಅತ್ತಾರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.