ADVERTISEMENT

ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಕ್ರಮ

ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹಿರೇಮನಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 10:48 IST
Last Updated 10 ಅಕ್ಟೋಬರ್ 2020, 10:48 IST
ಬೆಳಗಾವಿಯಲ್ಲಿ ಕೋವಿಡ್–19ನಿಂದ ಮೃತರಾದ ಪೌರಕಾರ್ಮಿಕ ಭರಮ ಬುಕ್ಯಾಳಕರ ಅವರ ಕುಟುಂಬದವರಿಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಶನಿವಾರ ₹ 30 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು
ಬೆಳಗಾವಿಯಲ್ಲಿ ಕೋವಿಡ್–19ನಿಂದ ಮೃತರಾದ ಪೌರಕಾರ್ಮಿಕ ಭರಮ ಬುಕ್ಯಾಳಕರ ಅವರ ಕುಟುಂಬದವರಿಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಶನಿವಾರ ₹ 30 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು   

ಬೆಳಗಾವಿ: ‘ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ 501 ಮ್ಯಾನುವಲ್ ಸ್ಕ್ಯಾವೆಂಜರ್ (ಮಲ ಹೊರುವವರು)ಗಳನ್ನು ಗುರುತಿಸಲಾಗಿದೆ. ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರನ್ನು ಈ ಕೆಲಸದಿಂದ ಹೊರತರಲು ಪ್ರಯತ್ನಿಸಲಾಗುತ್ತಿದೆ’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ತಿಳಿಸಿದರು.

ಕೋವಿಡ್–19ನಿಂದ ಮೃತರಾದ ಪೌರಕಾರ್ಮಿಕ ಭರಮ ಬುಕ್ಯಾಳಕರ ಅವರ ಕುಟುಂಬದವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸರ್ಕಾರದಿಂದ ನೀಡಲಾದ ₹ 30 ಲಕ್ಷ ಪರಿಹಾರ ಧನದ ಚೆಕ್ ಅನ್ನು ಶನಿವಾರ ವಿತರಿಸಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ಪತ್ತೆ ಹಚ್ಚುವ ಸಮೀಕ್ಷೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸಮೀಕ್ಷೆ ವಿಳಂಬವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 147, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 280 ಹಾಗೂ ಗ್ರಾಮೀಣ ಪ್ರದೇಶದಲ್ಲಿ 74 ಮಲ ಹೊರುವ ಕಾರ್ಮಿಕರನ್ನು ಗುರುತಿಸಲಾಗಿದೆ. ತಿಂಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ಸರ್ಕಾರದಿಂದ ಸೌಲಭ್ಯ:‘ಆ ಕೆಲಸದಿಂದ ಹೊರಬಂದವರಿಗೆ ₹ 40ಸಾವಿರ ನೆರವು ನೀಡಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಬಯಸುವವರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಅವರ ಮಕ್ಕಳಿಗೆ ಶಿಕ್ಷಣ ಒದಗಿಸಲಾಗುವುದು. ಪರ್ಯಾಯ ವೃತ್ತಿ ಕೈಗೊಳ್ಳಲು ಕೌಶಲ ತರಬೇತಿಯನ್ನೂ ನೀಡಲಾಗುವುದು. ಬೆಳಗಾವಿಯನ್ನು ಮಲ ಹೊರುವ ಕಾರ್ಮಿಕರ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ರಾಜ್ಯದಲ್ಲಿ 3,500 ಪೌರಕಾರ್ಮಿಕರಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ. ಎರಡು ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದರು.

ಕೊರೊನಾ ಯೋಧರು:‘ಪೌರಕಾರ್ಮಿಕರು ಕೂಡ ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಅವರಿಗೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿತರಿಸಲಾಗುತ್ತಿದೆ. ಅವರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವರ ಕೆಲಸ ಕಾಯಂಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬೆಳಗಾವಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 1,300 ಪೌರಕಾರ್ಮಿಕರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ, ಬಿಜೆಪಿ ಮುಖಂಡ ಕಿರಣ ಜಾಧವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.