ADVERTISEMENT

ಹಡಗಿನಾಳ: ಗರಡಿ ಮನೆ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 15:07 IST
Last Updated 6 ಜುಲೈ 2021, 15:07 IST
ಗೋಕಾಕ ತಾಲ್ಲೂಕಿನ ಹಡಗಿನಾಳ ಗ್ರಾಮದಲ್ಲಿ ಮೋಟಬಸಪ್ಪ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಶಾಸಕ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು
ಗೋಕಾಕ ತಾಲ್ಲೂಕಿನ ಹಡಗಿನಾಳ ಗ್ರಾಮದಲ್ಲಿ ಮೋಟಬಸಪ್ಪ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಶಾಸಕ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ‘ಗ್ರಾಮೀಣ ಜನರು ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಪೂರಕವಾಗಿರುವ ಕುಸ್ತಿಯಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ’ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ– ಮಹಾರಾಜರ ಕಾಲದಲ್ಲಿ ಕುಸ್ತಿಗೆ ಬಹಳ ಮಹತ್ವವಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು ಕುಸ್ತಿ ಆಟವನ್ನು ನೋಡುವಂತಾಗಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

‘ಗ್ರಾಮೀಣ ಕ್ರೀಡೆಗಳನ್ನು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು. ಭಾರತೀಯ ಇತಿಹಾಸ ಮತ್ತು ಸಂಸ್ಕೃತಿ ವೈಭವೀಕರಿಸಲು ಕುಸ್ತಿ, ಕಬಡ್ಡಿಯಂತಹ ದೇಸಿ ಆಟಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಿಸಲು ₹ 15 ಲಕ್ಷ ಮಂಜೂರು ಮಾಡಲಾಗಿದೆ’ ಎಂದು ಹೇಳಿದರು.

‘ಲಾಕ್‌ಡೌನ್‌ ಸಡಿಲಿಕೆ ನಂತರ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಇದು ಸಲ್ಲದು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. ಇದರಿಂದ ನಿಮ್ಮಲ್ಲಿರುವ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ’ ಎಂದು ತಿಳಿಸಿದರು.

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಗರಡಿ ಮನೆ, ಮುತ್ತೇಶ್ವರ ದೇವಸ್ಥಾನದ ಮಹಾದ್ವಾರ ಮತ್ತು ಮೋಟಬಸಪ್ಪ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಿದರು.

ಉದಗಟ್ಟಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ದೊಡಮನಿ, ಮುಖಂಡರಾದ ರಾಜೇಂದ್ರ ಸಣ್ಣಕ್ಕಿ, ನಾಗಪ್ಪ ಮಂಗಿ, ಮುತ್ತೇನಗೌಡ ಪಾಟೀಲ, ಮುದಕಪ್ಪ ತಳವಾರ, ಬಾಳಪ್ಪ ಕಲ್ಲೋಳಿ, ಮುತ್ತೆಪ್ಪ ಆಡಿನ, ಬಸಪ್ಪ ಶೀಗಿಹಳ್ಳಿ, ಯಲ್ಲಪ್ಪಸ್ವಾಮಿ ವಡೇರ, ರಾಮಚಂದ್ರ ಪತ್ತಾರ, ಕಾಮಪ್ಪ ಚಿಗಡೊಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.