ADVERTISEMENT

ಹಾಸ್ಟೆಲ್‌ ಮಕ್ಕಳ ಸುರಕ್ಷತೆಗೆ ತಾಕೀತು

ಜಿಲ್ಲೆಯ ವಾರ್ಡನ್‌ಗಳ ಸಭೆಯಲ್ಲಿ ಸಿಇಒ ರಾಹುಲ್‌ ಶಿಂಧೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 2:36 IST
Last Updated 24 ಜನವರಿ 2026, 2:36 IST
ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಹಾಸ್ಟೆಲ್‌ ವಾರ್ಡನ್‌ಗಳ ಆನ್‌ಲೈನ್‌ ಸಭೆಯಲ್ಲಿ ಸಿಇಒ ರಾಹುಲ್‌ ಶಿಂಧೆ ಮಾತನಾಡಿದರು
ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಹಾಸ್ಟೆಲ್‌ ವಾರ್ಡನ್‌ಗಳ ಆನ್‌ಲೈನ್‌ ಸಭೆಯಲ್ಲಿ ಸಿಇಒ ರಾಹುಲ್‌ ಶಿಂಧೆ ಮಾತನಾಡಿದರು   

ಬೆಳಗಾವಿ: ‘ವಸತಿ ನಿಲಯಗಳಲ್ಲಿ ಯಾವುದೇ ಕಾರಣಕ್ಕೂ ಅಹಿತರ ಘಟನೆ ನಡೆಯದಂತೆ ನಿಲಯಪಾಲಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಮತ್ತು ಸರ್ಕಾರಿ ವಸತಿ ನಿಲಯಗಳ ನಿಲಯಪಾಲಕರ ವಿಡಿಯೊ ಸಂವಾದದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಸತಿ ನಿಲಯಗಳ ಸಮರ್ಪಕ ನಿರ್ವಹಣೆಯಲ್ಲಿ ವಾರ್ಡನ್‌ಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ, ವಾರ್ಡನ್‌ಗಳು ಬದ್ಧತೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಸತಿನಿಲಯದಲ್ಲಿನ ಎಲ್ಲ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಕಾಳಜಿಯಿಂದ ಕಾಣಬೇಕು. ನಿಗದಿತ ಸಮಯದಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಸತಿ ನಿಲಯಗಳಲ್ಲಿನ ಪ್ರತಿಯೊಂದು ವಿಷಯಗಳ ಮೇಲೆ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

‘ಮುಖ್ಯವಾಗಿ ವಸತಿನಿಲಯಗಳಲ್ಲಿ ಭದ್ರತೆಗೆ ಕ್ರಮವಹಿಸಬೇಕು. ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವ ಜೊತೆಗೆ ಕಡ್ಡಾಯವಾಗಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ವಿದ್ಯುತ್ ವ್ಯವಸ್ಥೆ ಸೇರಿ ಇನ್ನಿತರೇ ಅಪಾಯದ ಅಂಶಗಳನ್ನು ಗಮನಿಸಿ ಕೂಡಲೇ ಸರಿಪಡಿಸಿಕೊಳ್ಳಬೇಕು. ಮಕ್ಕಳಿಗೆ ಅಪಾಯಗಳ ಬಗ್ಗೆ ಎಚ್ಚರವಹಿಸುವಂತೆ ಜಾಗೃತಿ ಮೂಡಿಸಬೇಕು. ಪ್ರತಿ ಮಕ್ಕಳ ಬಗ್ಗೆಯೂ ವೈಯಕ್ತಿಕವಾಗಿ ಗಮನವಹಿಸಬೇಕು’ ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

‘ವಸತಿನಿಲಯದಲ್ಲಿನ ತರಕಾರಿ, ಬೇಳೆಕಾಳುಗಳು ಸೇರಿ ಎಲ್ಲ ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳ ನಿರ್ವಹಣೆಗೆ ಕ್ರಮವಹಿಸಬೇಕು. ಪ್ರತಿದಿನ ವಸತಿ ನಿಲಯಗಳಲ್ಲಿ ಹಾಜರಿದ್ದು ಮೇಲುಸ್ತುವಾರಿ ಮಾಡಬೇಕು’ ಎಂದು ಸೂಚನೆ ನೀಡಿದರು.

ಅಂಗನವಾಡಿ ಆಹಾರದ ಗುಣಮಟ್ಟ ಪರಿಶೀಲಿಸಿ: ‘ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿಗಳಿಗೆ ಭೇಟಿ ನೀಡಿ, ಆಹಾರ ಪದಾರ್ಥಗಳು ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಬೇಕು. ಅಂಗನವಾಡಿ ಮೇಲ್ವಿಚಾರಕಿಯರಿಗೆ ಸೂಕ್ತ ನಿರ್ದೇಶನ ನೀಡಬೇಕು. ಯಾವುದೇ ದೂರುಗಳು ಬರದಂತೆ ನಿಗಾವಹಿಸಬೇಕು’ ಎಂದು ಸಿಇಒ ಹೇಳಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನೊಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಿ.ಎಂ. ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ಎನ್. ಚೇತನಕುಮಾರ, ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು, ವಸತಿನಿಲಯಗಳ ನಿಲಯಪಾಲಕರು, ಪ್ರಾಂಶುಪಾಲರು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.

‘ಅವ್ಯವಸ್ಥೆ ಕಂಡುಬಂದರೆ ಶಿಸ್ತುಕ್ರಮ’

‘ನಾನು ಕೂಡ ನಾಳೆಯಿಂದ ವಸತಿನಿಲಯಗಳಿಗೆ ಭೇಟಿ ನೀಡುತ್ತೇನೆ. ಆ ಸಂದರ್ಭದಲ್ಲಿ ಅವ್ಯವಸ್ಥೆ ಕಂಡುಬಂದರೆ ವಾರ್ಡನ್ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ರಾಹುಲ್‌ ಶಿಂಧೆ ತಿಳಿಸಿದರು. ‘ವಸತಿನಿಲಯಗಳ ನಿರ್ವಹಣೆಗೆ ಲಭ್ಯವಿರುವ ಅನುದಾನವನ್ನು ನಿಗದಿತ ಕಾರ್ಯಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಗ್ರೂಪ್-ಡಿ ಸೇರಿ ಇನ್ನಿತರೇ ಸಿಬ್ಬಂದಿಯ ವೇತನವನ್ನು ನಿಗದಿತ ಸಮಯಕ್ಕೆ ಮಾಡಬೇಕು. ಬಾಡಿಗೆ ಕಟ್ಟಡಗಳಲ್ಲಿರುವ ವಸತಿ ನಿಯಲಗಳ ಬಾಡಿಗೆಯನ್ನು ಪಾವತಿಸಬೇಕು’ ಎಂದು ಸೂಚಿಸಿದರು. ‘ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ಕೂಡ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.