ADVERTISEMENT

ಮತ್ತೆ ಕಾಂಗ್ರೆಸ್‌ಗೆ ಹೋಗುವುದಿಲ್ಲ: ಬೈರತಿ ಬಸವರಾಜ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 13:08 IST
Last Updated 7 ಜನವರಿ 2021, 13:08 IST
ಬೈರತಿ ಬಸವರಾಜ್
ಬೈರತಿ ಬಸವರಾಜ್   

ಬೆಳಗಾವಿ: ‘ಪಕ್ಷ ಬಿಟ್ಟು ಹೋದವರು ಮತ್ತೆ ಮರಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಮತ್ತೆ ಪಕ್ಷ ಬದಲಿಸಲ್ಲ. ಬಿಜೆಪಿಯಿಂದಲೇ ಮತ್ತೆ ಶಾಸಕನಾಗುತ್ತೇನೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಇಲ್ಲಿ ಗುರುವಾರ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಜಕಾರಣದಲ್ಲಿ ಇರುವವರೆಗೂ ನಾನು ಬಿಜೆಪಿಯಲ್ಲೇ ಇರುತ್ತೇನೆ. ಮತ್ತೆ ಕಾಂಗ್ರೆಸ್‌ ಸಹವಾಸಕ್ಕೆ ಹೋಗುವುದಿಲ್ಲ’ ಎಂದು ತಿಳಿಸಿದರು.

‘ಮುಂದಿನ ಚುನಾವಣೆಯಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ’ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಇತ್ತೀಚೆಗೆ ಅವರು ಜ್ಯೋತಿಷಿ ಆಗುತ್ತಿದ್ದಾರೋ ಅಥವಾ ಕನಸು ಬೀಳುತ್ತಿದೆಯೋ ಗೊತ್ತಿಲ್ಲ. ಅವರ ಊಹೆ ನಿಜವಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ. ಅವರು ಸಮರ್ಥವೂ ಇದ್ದಾರೆ’ ಎಂದರು.

‘ಮುಂಬರುವ ಬೆಳಗಾವಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆಯ ಮೇಲೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಬಿಜೆಪಿಯವರೇ ಮೇಯರ್ ಆಗಲಿದ್ದಾರೆ’ ಎಂದು ಭರವಸೆ ವ್ಯಕ್ತಪಡಿಸಿದರು.

‘ಪಾಲಿಕೆ ಮುಂಭಾಗ ಕನ್ನಡ ಪರ ಹೋರಾಟಗಾರರು ಹಾರಿಸಿರುವ ಕನ್ನಡ ಧ್ವಜದ ವಿಚಾರದಲ್ಲಿ ಜಿಲ್ಲಾಡಳಿತ ಗಮನಹರಿಸಲಿದೆ. ಆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

‘ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ನಮ್ಮೊಂದಿಗೆ ಬಂದಿರುವ ಆರ್.ಶಂಕರ್, ಮುನಿರತ್ನ ಹಾಗೂ ಎಂ.ಟಿ.ಬಿ. ನಾಗರಾಜ್ ಸಚಿವರಾಗಲಿದ್ದಾರೆ. ಮುಖ್ಯಮಂತ್ರಿ ನಮ್ಮನ್ನು ಕಡೆಗಣಿಸಿಲ್ಲ. ಅವರ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಸಿ.ಪಿ. ಯೋಗೀಶ್ವರ್‌ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.