ADVERTISEMENT

ಸ್ವಾತಂತ್ರ್ಯವನ್ನು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯ: ಲಿಂಬಾವಳಿ

ಕಿತ್ತೂರಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 7:00 IST
Last Updated 12 ಮಾರ್ಚ್ 2021, 7:00 IST
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ನೇರ ಪ್ರಸಾರ
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ನೇರ ಪ್ರಸಾರ   

ಬೆಳಗಾವಿ: ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದ ನೆನಪು ಮಾಡಿಕೊಡುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಮಹಾತ್ಮಗಾಂಧಿ ದಂಡಿ ಯಾತ್ರೆ ಶುರು ಮಾಡಿದ ದಿನದ ಸ್ಮರಣೆ, ಇಡೀ ದೇಶದಲ್ಲಿ 75 ವಾರಗಳವರೆಗೆ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಅನೇಕರ ತ್ಯಾಗ, ಬಲಿದಾನದಿಂದ ದೇಶ ಸ್ವಾತಂತ್ರ್ಯ ಪಡೆದಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಾಗಿದೆ. ಈ ಕಾರ್ಯಕ್ರಮ ಜನಾಂದೋಲನ ಆಗಬೇಕು ಎನ್ನುವುದು ಮೋದಿ ಅವರ ಕನಸಾಗಿದೆ. ಮುಂದೇನು ಸಾಧಿಸಬೇಕು ಎನ್ನುವುದನ್ನು ಯೋಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಮೊದಲಿಗೆ ಬ್ರಿಟಿಷರ ವಿರುದ್ಧ ಹೋರಾಟ ಶುರು ಮಾಡಿದರು. ಸಂಗೊಳ್ಳಿರಾಯಣ್ಣ ಹಾಗೂ ಅಮಟೂರು ಬಾಳಪ್ಪ ಅವರ ಪುಣ್ಯಭೂಮಿ ಇದು ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಬಹಳಷ್ಟಿದೆ. ಉತ್ತರ ಕರ್ನಾಟಕದಲ್ಲೂ ಸ್ವಾತಂತ್ರ್ಯದ ಕಿಚ್ಚು ಹಚ್ಚಿದವರು ಬಹಳಷ್ಟು ಮಂದಿ ಇದ್ದಾರೆ.

ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ. ಸಿಂಹ ಓಡುವಾಗ ಹಿಂದೆ ನೋಡಿಕೊಳ್ಳುವಂತೆ ಸಿಂಹಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರು ಸಂತೋಷ ಪಡುವಂತೆ ಆಗಬೇಕು; ಅವರಿಗೆ ಹೆಮ್ಮೆ ಮೂಡಿಸಬೇಕು ಎಂದು ತಿಳಿಸಿದರು.

ಸ್ವಾತಂತ್ರ್ಯ ಸಿಗದಿರುವ ಕ್ಷೇತ್ರಗಳಲ್ಲಿ ಸ್ವಾತಂತ್ರ್ಯ ಪಡೆಯಲು ಹೋರಾಟ ಹಾಗೂ ಚಿಂತನೆಯನ್ನು ನಾವು ಮಾಡಬೇಕಾಗಿದೆ ಎಂದರು. ತಾಲ್ಲೂಕು, ಗ್ರಾಮಗಳಲ್ಲಿ ಪ್ರತಿ ವಾರ ಕಾರ್ಯಕ್ರಮ ಮಾಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಮರಳಿ ತರುವುದು ಮೊದಲಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಬೇಕಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕಿತ್ತೂರು ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಜೆಟ್ ನಲ್ಲಿ ₹50 ಕೋಟಿ ನೀಡಲಾಗಿದೆ ಎಂದು ಹೇಳಿದರು.

ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಮಹಾಂತೇಶ ದೊಡ್ಡಗೌಡರ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.