
ಬೆಳಗಾವಿ: ‘ಇಲ್ಲಿನ ಜೆಎನ್‌ಎಂಸಿ ಕ್ಯಾಂಪಸ್‌ನ ಕೆಎಲ್‌ಇ ಸೆಂಟೇನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಜೂನ್ 11ರಿಂದ 13ರವರೆಗೆ ‘ವಿಷನ್ ಕರ್ನಾಟಕ-2025’ ಪ್ರದರ್ಶನ ಆಯೋಜಿಸಲಾಗಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ವಿವಿಧ ಯೋಜನೆಗಳು, ಅವುಗಳ ಅನುಷ್ಠಾನದ ಕುರಿತು ಜನರಿಗೆ ಸಮಗ್ರವಾಗಿ ಮಾಹಿತಿ ನೀಡಲು ಈ ಪ್ರದರ್ಶನ ಹಮ್ಮಿಕೊಂಡಿದ್ದೇವೆ. ಇದರಲ್ಲಿ ಕೇಂದ್ರ ಸರ್ಕಾರದ 50ಕ್ಕೂ ಅಧಿಕ ಸಚಿವಾಲಯಗಳು, ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಪಾಲ್ಗೊಳ್ಳಲಿವೆ’ ಎಂದರು.
‘ಪ್ರಯಾಸ್ ಎಕ್ಜಿಬಿಷನ್ಸ್ ಆ್ಯಂಡ್ ಪ್ರೋಮೋಷನ್ಸ್ ಸಂಸ್ಥೆಯ ಸಿಬ್ಬಂದಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಬ್ಯಾಂಕ್‌ಗಳ ಮೂಲಕ ಲಭ್ಯವಿರುವ ಹಣಕಾಸು ಆಯ್ಕೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಉದ್ಯಮಶೀಲತಾ ಅವಕಾಶಗಳ ಬಗ್ಗೆಯೂ ಜಾಗೃತಿ ಮೂಡಿಸಲಿದ್ದಾರೆ’ ಎಂದು ವಿವರಿಸಿದರು.
‘ಈ ಪ್ರದರ್ಶನದಲ್ಲಿ ರಕ್ಷಣಾ, ವಿಜ್ಞಾನ ಮತ್ತು ತಂತ್ರಜ್ಞಾನ, ಹೆಲ್ತ್ ಕೇರ್, ಕೃಷಿ, ಎಲೆಕ್ಟ್ರಾನಿಕ್ ಮತ್ತು ಇನ್‌ಫಾರ್ಮೇಷನ್ ಟೆಕ್ನಾಲಜಿ, ರೈಲ್ವೆ, ಬ್ಯಾಂಕಿಂಗ್, ವಾಣಿಜ್ಯ ಮತ್ತು ವ್ಯಾಪಾರ, ವಸತಿ ಮತ್ತು ನಗರ ವ್ಯವಹಾರಗಳು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಎಂಎಸ್‌ಎಂಇ, ಔಷಧ, ಹಡಗು ಮತ್ತು ಜಲಮಾರ್ಗ, ಜಲಸಂಪನ್ಮೂಲ, ಜವಳಿ ಮತ್ತಿತರ ಕ್ಷೇತ್ರಗಳ ಬಗ್ಗೆ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.
‘ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ’
‘ನಾನು ಸಂಸದನಾಗಿ ಆಯ್ಕೆಯಾದ ನಂತರ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ. ಸ್ಥಗಿತಗೊಂಡಿದ್ದ ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಗೆ ಚಾಲನೆ ಕೊಡಿಸಿದ್ದೇನೆ. ಪ್ರಗತಿ ಪರಿಶೀಲನೆಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಭೆಗಳನ್ನು ನಡೆಸುತ್ತಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
‘ಸುರೇಶ ಅಂಗಡಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಅವಧಿಯಲ್ಲಿ ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕಾಗಿ ₹927 ಕೋಟಿ ಅನುದಾನ ಮಂಜೂರಾಗಿತ್ತು. ಆದರೆ, ಭೂಸ್ವಾಧೀನ ಪ್ರಕ್ರಿಯೆ ನಡೆಯದೆ ಯೋಜನೆ ಅನುಷ್ಠಾನಕ್ಕೆ ತೊಡಕಾಗಿತ್ತು. ಈಗ ಯೋಜನೆಗೆ ಸ್ವಾಧೀನ ಪಡಿಸಿಕೊಳ್ಳಬೇಕಾದ ಭೂಮಿಗಳ ಸರ್ವೆ ಕಾರ್ಯ ನಡೆಸಲಾಗಿದ್ದು, ರೈತರಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಭೂಮಿ ಸ್ವಾಧೀನಪಡಿಸಿಕೊಂಡು, 6 ತಿಂಗಳಲ್ಲಿ ಕಾಮಗಾರಿ ಆರಂಭಿಸುತ್ತೇವೆ’ ಎಂದರು.
‘ಹಲಗಾ–ಮಚ್ಛೆ ಬೈಪಾಸ್ ರಸ್ತೆ ಮತ್ತು ವರ್ತುಲ ರಸ್ತೆ ನಿರ್ಮಾಣಕ್ಕೆ ಇದ್ದ ಅಡೆತಡೆಗಳನ್ನು ಪರಿಹರಿಸಲಾಗಿದೆ. ಕೇಂದ್ರವು ರಿಂಗ್ ರಸ್ತೆಗೆ ₹3,600 ಕೋಟಿ ಮಂಜೂರು ಮಾಡಿದ್ದರೂ, ಹಣ ಬಳಸಲಾಗಿಲ್ಲ. ಶೀಘ್ರ ಈ ಕಾಮಗಾರಿ ಆರಂಭವಾಗಲಿದೆ’ ಎಂದು ಹೇಳಿದರು.
‘ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರ ಪ್ರಯತ್ನದಿಂದ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರವು ಅನುದಾನ ಬಿಡುಗಡೆ ಮಾಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಆದರೆ, ವಾಸ್ತವವಾಗಿ ಅವರೊಬ್ಬರ ಪ್ರಯತ್ನದಿಂದ ಅಲ್ಲ. ನನ್ನ ಪತ್ರದಿಂದಲೂ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.
‘ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ನಾನೂ ವಿನಂತಿಸಿದ್ದೆ. ಇದಕ್ಕೆ ಸ್ಪಂದಿಸಿದ ಕೇಂದ್ರವು ₹100 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಪ್ರಧಾನಿ ಕಚೇರಿಯೂ ನನ್ನ ಪತ್ರ ಒಪ್ಪಿಕೊಂಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.