ADVERTISEMENT

ಉಚಿತ ಲಸಿಕೆಗೆ ಆಗ್ರಹಿಸಿ ಕರವೇ ‍‍‍ಪ್ರತಿಭಟನೆ 10ರಂದು

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 13:02 IST
Last Updated 2 ಜೂನ್ 2021, 13:02 IST

ಬೆಳಗಾವಿ: ‘ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ’ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಜೂನ್ 10ರಂದು ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯಿಂದ ರಾಜ್ಯದಾದ್ಯಂತ ಏಕಕಾಲಕ್ಕೆ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರ ಆನ್‌ಲೈನ್‌ ಈ ನಿರ್ಣಯ ಅಂಗೀಕರಿಸಲಾಗಿದೆ. ಕಾರ್ಯಕರ್ತರೆಲ್ಲರೂ ಸೇರಿ ಅಂದು ‘ಪ್ರತಿಭಟನಾ ದಿನ’ವನ್ನಾಗಿ ಆಚರಿಸಿ ಜನತೆಯ ಹಕ್ಕೊತ್ತಾಯವನ್ನು ಮಂಡಿಸಲಿದ್ದೇವೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಬ. ಗುಡಗನಟ್ಟಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಅರ್ಹರೆಲ್ಲರಿಗೂ ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಅಲ್ಲಲ್ಲಿ ಲಸಿಕೆ ಬೂತ್‌ಗಳನ್ನು ಸ್ಥಾಪಿಸಿ ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆ ನೀಡಬೇಕು ಎನ್ನುವುದು ವೇದಿಕೆಯ ಹಕ್ಕೊತ್ತಾಯವಾಗಿದೆ. ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.