ಜಗದೀಶ ಶೆಟ್ಟರ್
ಬೆಳಗಾವಿ: ‘ರಾಜೀವ್ ಗಾಂಧಿ ವಸತಿ ನಿಗಮದ ಮನೆ ಮಂಜೂರಾತಿಗೆ ಸಂಬಂಧಿಸಿ ಕಾಂಗ್ರೆಸ್‌ನ ಶಾಸಕ ಬಿ.ಆರ್.ಪಾಟೀಲ ಮಾತನಾಡಿದ ಆಡಿಯೊ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಬಯಲಾಗಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಬಿ.ಆರ್.ಪಾಟೀಲ ಅವರ ಆಡಿಯೊ, ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದನ್ನು ತೋರಿಸುತ್ತದೆ. ಈ ಹಿಂದೆ ಶಾಸಕ ಬಸವರಾಜ ರಾಯರೆಡ್ಡಿ ಕೂಡ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು’ ಎಂದರು.
‘ಕಂದಾಯ ಸಚಿವ ಕೃಷ್ಣಬೈರೇಗೌಡ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ವೇಳೆ, ‘ಇಲ್ಲಿ ಯಾವುದೇ ಪ್ರಮಾಣಪತ್ರ ಬೇಕಾದರೆ ತಿಂಗಳುಗಟ್ಟಲೇ ಅಲೆದಾಡಿಸುತ್ತಾರೆ. ಹಣ ಕೊಟ್ಟವರ ಕೆಲಸಗಳಷ್ಟೇ ಬೇಗ ಆಗುತ್ತಿವೆ’ ಎಂದು ಜನರು ದೂರಿದ್ದಾರೆ. ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದು, ನಿರ್ದಿಷ್ಟ ಕೆಲಸದ ದರ ಫಲಕ ಅಳವಡಿಸುವಂತೆ ಸೂಚಿಸಿದ್ದಾರೆ. ಇವೆಲ್ಲ ಭ್ರಷ್ಟಾಚಾರಕ್ಕೆ ಸಾಕ್ಷಿ’ ಎಂದು ಆರೋಪಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ ಅವರು ತಮ್ಮ ಸ್ಥಾನಕ್ಕೆ ಬೇಗ ರಾಜೀನಾಮೆ ನೀಡುವುದು ಒಳ್ಳೆಯದು’ ಎಂದರು.
‘ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ರಾಜ್ಯದ ಬಿಜೆಪಿ ನಾಯಕರು ಸಹಜವಾಗಿದ್ದಾರೆಯೇ ಹೊರತು, ಅಲ್ಲಿ ರಾಜಕೀಯದ ಬಗ್ಗೆ ಚರ್ಚೆಯೇ ಆಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ನಮ್ಮ ಪಕ್ಷದಲ್ಲಿನ ಜಗಳಗಳು ಬಗೆಹರಿದಿವೆ. ಇನ್ನೂ ಕೆಲವು ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.