
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಪರಿಷ್ಕರಣೆ ಮಾಡುವ ವಿಚಾರವಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುವರು. ಈ ವಿಷಯದಲ್ಲಿ ನಾನೇನು ಹೇಳಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆಯೂ ದೆಹಲಿಯಲ್ಲಿಯೇ ನಿರ್ಧಾರ ಆಗಬೇಕು’ ಎಂದರು.
‘ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಉತ್ತಮವಾಗಿ ಚರ್ಚೆಯಾಗಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮೂರು ದಿನ ಚರ್ಚಿಸಲಾಗಿದೆ. ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಸರ್ಕಾರ ನಿರ್ಧರಿಸಲಿದೆ’ ಎಂದರು.
‘ಕಲ್ಯಾಣ ಕರ್ನಾಟಕದ ಜನರು ಸವಲತ್ತು, ಅನುದಾನ ಪಡೆದುಕೊಳ್ಳಲು 40 ವರ್ಷ ಹೋರಾಟ ನಡೆಸಿದರು. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಸದ್ಯ ಅನುದಾನ ನೀಡಲಿಕ್ಕಿಲ್ಲ, ವಿಳಂಬವಾಗಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.