ಖಾನಾಪುರ: ‘ಮಳೆ ಸುರಿಯುವ ಸಂದರ್ಭದಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಸಮನಯ್ವತೆಯಿಂದ ಕೆಲಸ ನಿರ್ವಹಿಸಬೇಕು. ಹೆಚ್ಚು ಮಳೆ ಸುರಿಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು’ ಎಂದು ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ತಾಲ್ಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದ ಸ್ಥಿತಿಗತಿಯ ಪರಿಶೀಲನೆ ಕೈಗೊಂಡ ಅವರು, ಬಳಿಕ ಲೋಂಡಾ ಗ್ರಾಮದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅವರು ತಾಲ್ಲೂಕಿನ ಇದ್ದಲಹೊಂಡ ಮತ್ತು ಲೋಂಡಾ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಪಟ್ಟಣದ ಹೊರವಲಯದ ಮಲಪ್ರಭಾ ನದಿ ತೀರ, ಸಿಂಧನೂರು– ಹೆಮ್ಮಡರಾ ರಾಜ್ಯ ಹೆದ್ದಾರಿಯ ಮಂತುರ್ಗಾ ಬಳಿಯ ಅಲಾತ್ರಿ ಹಳ್ಳದ ಸೇತುವೆ, ಲೋಂಡಾ ಗ್ರಾಮದ ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಶಾಲಾ ಕಟ್ಟಡ, ಮೂಲ ಸೌಕರ್ಯಗಳು, ಶಿಕ್ಷಕರು ಹಾಗೂ ಮಕ್ಕಳ ಹಾಜರಾತಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಡಿಡಿಪಿಐ ಲೀಲಾವತಿ ಹಿರೇಮಠ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ತಾ.ಪಂ ಇಒ ರಮೇಶ ಮೇತ್ರಿ, ಪಂಚಾಯತರಾಜ್ ಇಲಾಖೆಯ ಎಇಇ ರಾಜೇಂದ್ರ ಜಾಧವ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪಿಡಿಒಗಳು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.