ಕುಡಚಿ: ‘ಅತಿವೃಷ್ಟಿಯಿಂದ ಬಿದ್ದ ಮನೆಗಳನ್ನು ನಿರ್ಮಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ₹3 ಲಕ್ಷ ಪರಿಹಾರ ಒದಗಿಸಲು ಚಿಂತನೆ ನಡೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ನೆರವು, ಬೇರೆ ಯೋಜನೆಗಳ ಲಾಭವೂ ಫಲಾನುಭವಿಗಳಿಗೆ ಸಿಗಲಿದೆ. ನೆರವಿನ ಮೊತ್ತ ಕಡಿಮೆಯಿದ್ದರೂ, ಎಲ್ಲರಿಗೂ ಪರಿಹಾರ ಒದಗಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರಾಯಬಾಗ ತಾಲ್ಲೂಕಿನ ಕುಡಚಿ ಸೇತುವೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಮಳೆಯಿಂದ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರ ₹5 ಲಕ್ಷ ಪರಿಹಾರ ಕೊಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದನ್ನು ಕಡಿಮೆ ಮಾಡಿದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ, ‘ಹಿಂದಿನ ಸರ್ಕಾರದವರು ₹5 ಲಕ್ಷ ಪರಿಹಾರ ಘೋಷಿಸಿದ್ದರು. ಆದರೆ,
ಎಲ್ಲರಿಗೂ ತಲುಪಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಾವು ಎಲ್ಲರಿಗೂ ಪರಿಹಾರ ಮುಟ್ಟಿಸಲಿದ್ದೇವೆ’ ಎಂದರು.
‘ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇಲ್ಲ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯುಸೆಕ್ ನೀರು ಬಿಟ್ಟರೆ ತೊಂದರೆ ಆಗಬಹುದು. ಆಗಲೂ ಪರಿಸ್ಥಿತಿ ನಿಭಾಯಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಿದ್ದು, ಪರಿಸ್ಥಿತಿ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಪೊಲೀಸರು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಒಂದುವೇಳೆ ಪ್ರವಾಹ ಪರಿಸ್ಥಿತಿ ತಲೆದೋರಿದರೆ, ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ರಕ್ಷಣಾ ತಂಡಗಳೂ ಸಿದ್ಧ ಇವೆ’ ಎಂದರು.
‘ಈಗಾಗಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಲು ಜನ ಹಿಂಜರಿಯುತ್ತಿದ್ದಾರೆ. ಅಧಿಕಾರಿಗಳು ಅವರ ಮನವೊಲಿಸಲಿದ್ದಾರೆ’ ಎಂದು ತಿಳಿಸಿದರು.
‘ಖಾನಾಪುರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸಬೇಕೆಂಬ ಬೇಡಿಕೆಯಿದೆ. ಶುಕ್ರವಾರ ತಳೇವಾಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಪುನರ್ವಸತಿ ಕಲ್ಪಿಸುತ್ತೇವೆ’ ಎಂದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ‘ಬುಡಾ’ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ ಮೀನಾ, ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ರಾಯಬಾಗ ತಹಶೀಲ್ದಾರ್ ಕೆ.ಎಸ್.ಕುಲಕರ್ಣಿ ಇದ್ದರು.
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ನೋಡೋಣ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಅವರೇಕೆ ರಾಜೀನಾಮೆ ನೀಡಬೇಕು’ ಎಂದೂ ಪ್ರಶ್ನಿಸಿದರು.
ಮಹಾರಾಷ್ಟ್ರದಲ್ಲಿ ಮಳೆ ವಿಚಾರವಾಗಿ ಮೂರು ದಿನ ‘ರೆಡ್ ಅಲರ್ಟ್’ ಇದೆ. ಜಿಲ್ಲೆಯಲ್ಲಿ ಸದ್ಯ 35 ದೋಣಿ ಲಭ್ಯ ಇವೆ. ಅಗತ್ಯಬಿದ್ದರೂ ಕಾರವಾರದಿಂದ ಹೆಚ್ಚುವರಿ ಬೋಟ್ ತರಿಸಲಾಗುವುದು
-ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ
ಖಾನಾಪುರದಲ್ಲಿ ಎನ್‌ಡಿಆರ್‌ಎಫ್ ತಂಡ ನಿಯೋಜಿಸಿದ್ದೇವೆ. ಪರಿಸ್ಥಿತಿ ಆಧರಿಸಿ ನದಿದಡದ ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ
-ಭೀಮಾಶಂಕರ ಗುಳೇದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.