ADVERTISEMENT

ಬೆಳಗಾವಿ: ಸಿ ಆ್ಯಂಡ್‌ ಆರ್‌ ನಿಯಮಗಳ ತಿದ್ದುಪಡಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 12:18 IST
Last Updated 12 ಆಗಸ್ಟ್ 2025, 12:18 IST
   

ಬೆಳಗಾವಿ: ‘ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು’ ಎಂದು ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಮಳೆಯಲ್ಲೇ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

‘ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರ ಪೈಕಿ, ಪದವೀಧರರಿಗೆ ಆರರಿಂದ ಎಂಟನೇ ತರಗತಿಗೆ ಪಾಠ ಪಾಡಲು ಜಿಪಿಟಿ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಇದಕ್ಕೆ ತೊಡಕಾಗಿರುವ ವೃಂದ ಮತ್ತು ನೇಮಕಾತಿ ನಿಯಮ–2017ಕ್ಕೆ ತಿದ್ದುಪಡಿ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ, ‘ಆ.25ರೊಳಗೆ ಬೇಡಿಕೆ ಈಡೇರದಿದ್ದರೆ, ರಾಜ್ಯದಲ್ಲಿನ ಎಲ್ಲ ಸರ್ಕಾರಿ ಶಾಲೆಗಳನ್ನು ಮುಚ್ಚಿ ಸೆ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತೇವೆ. ಅಂದು ಸಹ ಬೇಡಿಕೆ ಈಡೇರದಿದ್ದರೆ ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ, ಅಲ್ಲಿಯೇ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.

ಮುಖಂಡರಾದ ರಮೇಶ ಗೋಣಿ, ಎಂ.ಎಫ್‌.ಸಿದ್ದನಗೌಡರ, ಎಸ್‌.ವಿ.ಹುಗ್ಗಿ, ವೈ.ಬಿ.‍‍ಪೂಜೇರಿ, ಕೆ.ಎಸ್‌.ರಾಚನ್ನವರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.