ADVERTISEMENT

ಆರೋಪಿ ಮತ್ತೆ 10 ದಿನ ಸಿಐಡಿ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 11:21 IST
Last Updated 23 ಜೂನ್ 2021, 11:21 IST

ಬೆಳಗಾವಿ: ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿದ್ದ 4 ಕೆ.ಜಿ. 900 ಗ್ರಾಂ. ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಕಿರಣ ವೀರನಗೌಡರ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಮತ್ತೆ 10 ದಿನಗಳವರೆಗೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಇಲ್ಲಿನ 5ನೇ ಜೆಎಂಎಫ್‌ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ ಸಿಐಡಿಯವರು, ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ನಕಲಿ ಪೊಲೀಸ್ ಗುರುತಿನ ಚೀಟಿ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ 10 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ನ್ಯಾಯಾಧೀಶೆ ಚೈತ್ರಾ ಕುಲಕರ್ಣಿ ಅವರು ಆರೋಪಿಯನ್ನು ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಆರೋಪಿಯನ್ನು ಜೂನ್‌ 6ರಂದು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಜೂನ್ 7ರಂದು ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಎದುರು ಹಾಜರುಪಡಿಸಿ, 14 ದಿನ ಕಸ್ಟಡಿಗೆ ಪಡೆದಿದ್ದರು. ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ನಕಲಿ ಪೊಲೀಸ್ ಗುರುತಿನ ಚೀಟಿ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದೆ ಎಂದು ಮೂಲಗಳು ಖಚಿತಪಡಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.