
ಚನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಸ್ವಚ್ಛತೆಗೆ ಹೆಚ್ಚು ಗಮನ ಹರಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಸೂಚಿಸಿದರು.
ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ನಡೆದ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ಕಾಲ ಆರಂಭಗೊಂಡಿರುವುದಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನೀರಿನ ಗುಣಮಟ್ಟವನ್ನೂ ಆಗಾಗ್ಗೆ ಪರೀಕ್ಷಿಸಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಪೂರೈಕೆಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕರ ವಸೂಲಾತಿ ಅಭಿಯಾನದಲ್ಲಿ ಶೇ 100ರಷ್ಟು ಸಾಧನೆ ಮಾಡಲು ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ವಸತಿ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ (ಎಸ್‌ಬಿಎಂ) ಯೋಜನೆಯಡಿ ಬಾಕಿ ಉಳಿದಿರುವ ಜಿಯೋ-ಟ್ಯಾಗಿಂಗ್ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಆದ್ಯತೆಯಾಗಿರಬೇಕು. 15ನೇ ಹಣಕಾಸು ಆಯೋಗ ಹಾಗೂ ನಿಧಿ–2ರ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮಾದರಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಹಾಯಕ ನಿರ್ದೇಶಕರಾದ ಮಹಮ್ಮದ್ ಗೌಸ್ ರಿಸಲ್ದಾರ್, ವಿಜಯ್ ಪಾಟೀಲ್, ಯೋಜನಾಧಿಕಾರಿ ಗೌಡಪ್ಪ ಗಿರಿಮಲ್ಲನವರ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.