ADVERTISEMENT

‘ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ’ ರಚನೆ: ಸಿಎಂಗೆ ಆಗ್ರಹ

ಶಾಸಕರ ಪರವಾಗಿ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮನವಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 2:32 IST
Last Updated 21 ಡಿಸೆಂಬರ್ 2025, 2:32 IST
‘ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ’ ರಚನೆಗೆ ಆಗ್ರಹಿಸಿ, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈಚೆಗೆ ಶಾಸಕ ಎನ್.ಎಚ್. ಕೋನರಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು
‘ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ’ ರಚನೆಗೆ ಆಗ್ರಹಿಸಿ, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈಚೆಗೆ ಶಾಸಕ ಎನ್.ಎಚ್. ಕೋನರಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು   

ಬೆಳಗಾವಿ: ‘ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ‘ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ’ ರಚನೆ ಮಾಡಿ, ಪ್ರತಿ ವರ್ಷ ₹5,000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ಶಾಸಕರ ಪರವಾಗಿ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಈಚೆಗೆ ಮನವಿ ಸಲ್ಲಿಸಿದರು.

ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ವೇಳೆ ಮುಖ್ಯಮಂತ್ರಿ ಭೇಟಿಯಾಗಿ ಮನವಿ ನೀಡಿದ ಅವರು, ‘ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯುಳ್ಳ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಹಾಗೂ ಉತ್ತರ ಕನ್ನಡ ಅಭಿವೃದ್ಧಿಯ ದೃಷ್ಟಿಯಿಂದ ಮಂಡಳಿ ರಚನೆ ಮಾಡಿ’ ಎಂದರು.

‘ಈ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುವ ಅವಶ್ಯಕತೆ ಇದೆ. ಬೇರೆ ಬೇರೆ ಪ್ರದೇಶಗಳಿಗೆ ಹೋಲಿಸಿದರೆ ಕಿತ್ತೂರು ಕರ್ನಾಟಕ ಭಾಗವು ಆರ್ಥಿಕವಾಗಿ ಹಾಗೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಶಿಕ್ಷಣ, ಆರೋಗ್ಯ, ಸಾಕ್ಷರತೆ) ತೀರಾ ಹಿಂದುಳಿದಿದೆ. ರಾಜ್ಯದಲ್ಲಿ ಅತೀ ಕಡಿಮೆ ತಲಾ ಆದಾಯ ಇದೆ. ಇಲ್ಲಿ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯಗಳ ಕೊರತೆಯಿದೆ. ನಂಜುಂಡಪ್ಪ ವರದಿ ಅನ್ವಯ ಈ ಪ್ರಾದೇಶಿಕ ಅಸಮತೋಲನ ನಿವಾರಿಸಲು ವಿಶೇಷ ಆರ್ಥಿಕ ಪ್ಯಾಕೇಜ್, ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯ ಅಗತ್ಯವಿದೆ’ ಎಂದೂ ಕೋರಿದರು.

ADVERTISEMENT

ಕಿತ್ತೂರ ಕರ್ನಾಟಕ ಭಾಗದ ಎಲ್ಲ ಶಾಸಕರು ಚಳಿಗಾಲದ ಅಧಿವೇಶನದಲ್ಲಿ ಪಕ್ಷಾತೀತವಾಗಿ ಮಾತನಾಡಿ ಈ ಮನವಿ ನೀಡುತ್ತಿರುವುದಾಗಿಯೂ ಅವರು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿದರು.

ಸಚಿವರಾದ ಎಚ್.ಕೆ. ಪಾಟೀಲ, ಡಾ.ಜಿ.ಪರಮೇಶ್ವರ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.