
ಚನ್ನಮ್ಮನ ಕಿತ್ತೂರು: ‘ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡುವ ಪ್ರಸ್ತಾವಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಇದರಿಂದ ನಾಡಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ’ ಎಂದು ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ತಿಳಿಸಿದರು.
ಕಲ್ಮಠದಲ್ಲಿ ಈಚೆಗೆ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ‘ಸಿಂಡಿಕೇಟ್ ಸದಸ್ಯ ಮಹಾಂತೇಶ ಕಂಬಾರ ಸಹ ಈ ಬಗ್ಗೆ ಕುಲಸಚಿವರಿಗೆ ಮನವಿ ಸಲ್ಲಿಸಿದ್ದರು’ ಎಂದು ಮಾಹಿತಿ ನೀಡಿದರು.
‘ಸರ್ಕಾರದ ಗಮನಕ್ಕೆ ಹಲವು ಬೇಡಿಕೆಗಳ ಬಗ್ಗೆ ಈಗಾಗಲೇ ಗಮನ ಸೆಳೆಯಲಾಗಿದೆ. ವಿ.ವಿ ಆವರಣದಲ್ಲಿ ರಾಣಿ ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪಿಸಬೇಕು. ಐತಿಹಾಸಿಕ ಕಿತ್ತೂರು ಪಟ್ಟಣದಲ್ಲಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ ತೆರೆಯಬೇಕು ಎಂಬ ಬೇಡಿಕೆ ಈಡೇರಿಸಲು ಸರ್ಕಾರ ಹಾಗೂ ವಿವಿ ಮುಂದಾಗಬೇಕಿದೆ’ ಎಂದು ಹೇಳಿದರು.
ಮನವಿಗೆ ಸ್ಪಂದಿಸಿರುವ ಸರ್ಕಾರ, ಸಚಿವರು, ಶಾಸಕರು ಮತ್ತು ಸಿಂಡಿಕೇಟ್ ಸದಸ್ಯ ಮಹಾಂತೇಶ ಕಂಬಾರ ಅವರಿಗೂ ಕಿತ್ತೂರು ನಾಡಿನ ಜನರ ಪರವಾಗಿ ಅಭಿನಂದನೆಗಳನ್ನು ಶ್ರೀಗಳು ಸಲ್ಲಿಸಿದರು.
ಸಿಂಡಿಕೇಟ್ ಸದಸ್ಯ ಮಹಾಂತೇಶ ಕಂಬಾರ ಮಾತನಾಡಿ, ‘ವಿ.ವಿ ಆರಂಭವಾಗಿ ಒಂದೂವರೆ ದಶಕ ಕಳೆದಿದೆ. ಆವರಣದಲ್ಲಿ ಚನ್ನಮ್ಮ ಹಾಗೂ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಆಗಿಲ್ಲ. ಮುಂದಿನ ವಿವಿ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆಯಲಾಗುವುದು’ ಎಂದು ಭರವಸೆ ನೀಡಿದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಕಾಂತ ದಳವಾಯಿ, ಚಂದ್ರಗೌಡ ಪಾಟೀಲ ಮಾತನಾಡಿದರು. ಉಮೇಶ ಹುಂಬಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.