ADVERTISEMENT

ಡಿ.13ಕ್ಕೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್‌

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 11:30 IST
Last Updated 12 ಡಿಸೆಂಬರ್ 2021, 11:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ‘ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ಡಿ.13ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತ ವಿರೋಧಿಯಾದ 3 ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧವಾಗಿ ಹಿಂದಕ್ಕೆ ಪಡೆದಿದೆ. ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದೆಂಬ ನಿರೀಕ್ಷೆಯಿತ್ತು. ಆದರೆ, ಈಗ ಸರ್ಕಾರದ ಧೋರಣೆ ಬದಲಾಗಿದೆ. ಹೀಗಾಗಿ ಮುತ್ತಿಗೆ ಹಾಕಲು ತೀರ್ಮಾನಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಬರಲಿದ್ದಾರೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣವೇ ಎಚ್ಚೆತ್ತು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇದರ ಪರಿಣಾಮವನ್ನೂ ಎದುರಿಸಬೇಕಾಗುತ್ತದೆ’ ಎಂದ ಅವರು, ‘ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದರೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ದೆಹಲಿ ಮಾದರಿಯಲ್ಲಿ ರೈತ ಪಂಚಾಯತ್‌ ನಡೆಸಲಾಗುವುದು. ಮುಖ್ಯಮಂತ್ರಿ ಹಾಗೂ ಸಚಿವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.