ADVERTISEMENT

ದ್ವಿಭಾಷಾ ನೀತಿ ಜಾರಿಗೊಳಿಸಿ:ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 2:28 IST
Last Updated 6 ಜುಲೈ 2025, 2:28 IST
ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು   

ಬೆಳಗಾವಿ: ‘ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಮಾತ್ರ ಕಡ್ಡಾಯಗೊಳಿಸುವ ದ್ವಿಭಾಷಾ ನೀತಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯರವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ, ದ್ವಿತೀಯ ಭಾಷೆಯಾಗಿ ಇಂಗ್ಲಿಷ್‌ ಮತ್ತು ತೃತೀಯ ಭಾಷೆಯಾಗಿ ಹಿಂದಿ ಕಲಿಸಲಾಗುತ್ತಿದೆ. ಆದರೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ಹಿಂದಿ ಅನಗತ್ಯವಾದ ಒತ್ತಡ ಹೇರುತ್ತಿದೆ. 2024ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ಅನುತ್ತೀರ್ಣಗೊಂಡಿದ್ದಾರೆ. ಹಾಗಾಗಿ ರಾಜ್ಯದ ಮಕ್ಕಳಿಗೆ ಹಿಂದಿ ಹೇರಿಕೆ ಬೇಡ’ ಎಂದು ಒತ್ತಾಯಿಸಿದರು.

ADVERTISEMENT

‘ಕರ್ನಾಟಕದ ಶಾಲೆಗಳಲ್ಲಿ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ತೆಗೆಯಬೇಕು. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲೂ ಏಕರೂಪದ ದ್ವಿಭಾಷಾ ನೀತಿ ಜಾರಿಯಾಗಬೇಕು’ ಎಂದು ಆಗ್ರಹಿಸಿದರು. 

‘ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ಸುರೇಶ ಗವನ್ನವರ, ಸತೀಶ ಗುಡದವರ, 
ರುದ್ರಗೌಡ ಪಾಟೀಲ, ರಫಿಕ್‌ ಯರಗಟ್ಟಿ, ರೂಪಾಲಿ ಬಾರಿಗಡ್ಡಿ, ಲೋಕೇಶ ರಾಠೋಡ, ಅರ್ಜುನ ಕಾಂಬಳೆ, ಮಂಜುನಾಥ ರಾಠೋಡ, ನಾಗರಾಜ ಲಕ್ಕಪ್ಪಗೋಳ, ಗಂಗಾರಾಮ ಶೀಗಿಹಳ್ಳಿ, ವಿನಾಯಕ ಭೋವಿ ಇದ್ದರು.

‘ತ್ರಿಭಾಷಾ ನೀತಿಯಿಂದ ಲಾಭವಿಲ್ಲ’
‘ತಮಿಳುನಾಡಿನಲ್ಲಿ ತ್ರಿಭಾಷಾ ನೀತಿ ತಿರಸ್ಕರಿಸಿ ತಮಿಳು ಹಾಗೂ ಇಂಗ್ಲಿಷ್‌ ಒಳಗೊಂಡ ದ್ವಿಭಾಷಾ ನೀತಿ ಜಾರಿಗೆ ತರಲಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಜಾಗತಿಕ ವ್ಯವಹಾರ ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಇಂಗ್ಲಿಷ್‌ ಕಲಿಕೆ ಅಗತ್ಯವಾಗಿದೆ. ಆದರೆ ಹಿಂದಿ ಕಡ್ಡಾಯವಾಗಿ ಓದುವುದರಿಂದ ರಾಜ್ಯದ ಮಕ್ಕಳಿಗೆ ಉಪಯೋಗವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಲಾಭವಿಲ್ಲ’ ಎಂದು ಕಾರ್ಯಕರ್ತರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.