ADVERTISEMENT

ಕೋವಿಡ್ ಪರೀಕ್ಷಾ ಪ್ರಮಾಣ ಹೆಚ್ಚಿಸಲು ಲಕ್ಷ್ಮಿ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಮೇ 2021, 14:49 IST
Last Updated 27 ಮೇ 2021, 14:49 IST
ಬೆಳಗಾವಿ ತಾಲ್ಲೂಕಿನ ಉಚಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು
ಬೆಳಗಾವಿ ತಾಲ್ಲೂಕಿನ ಉಚಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು   

ಬೆಳಗಾವಿ: ‘ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು. ಜನರು ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು. ನಿರ್ಲಕ್ಷ್ಯ ವಹಿಸಬಾರದು’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಕ್ಷೇತ್ರದ ಉಚಗಾಂವ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.

‘ಕೊರೊನ ಸೋಂಕಿನಿಂದಾಗಿ ಜನರು ಭಯಭೀತರಾಗಿದ್ದಾರೆ. ಯಾರೂ ಭಯಪಡಬೇಕಿಲ್ಲ. ಆದರೆ, ಸೂಕ್ತ ಮುಂಜಾಗ್ರತೆ ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಗ್ರಾಮದಲ್ಲಿ ದಿನಕ್ಕೆ 50 ಜನರಿಗೆ ಲಸಿಕೆ ನೀಡಲಾಗುತ್ತಿದೆ. 8-10 ಮಂದಿಯ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗುತ್ತಿದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು. ಮನೆ ಮನೆಗಳಿಗೆ ತೆರಳಿ ಗಂಟಲು ದ್ರವಗಳ ಮಾದರಿ ಪಡೆಯಬೇಕು’ ಎಂದು ಸೂಚಿಸಿದರು.

ಬಳಿಕ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿದರು.

‘ಮುಂಗಾರು ಮಳೆ ಆರಂಭವಾಗುತ್ತಿದ್ದು, ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಉಳುಮೆ ಮಾಡಿ ಭೂಮಿ ಹದ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಕೂಡಲೇ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ಗೊಬ್ಬರಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸತತವಾಗಿ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇನೆ. ರೈತರಿಗೆ ಯಾವುದೇ ಸಮಸ್ಯೆ ಬಂದಲ್ಲಿ ಕೂಡಲೇ ಸಂಪರ್ಕಿಸಬೇಕು’ ಎಂದು ಕೋರಿದರು.

‘ರೈತರಿಗೆ ಬೀಜ, ಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸಕಾಲಕ್ಕೆ ಎಲ್ಲ ಕೃಷಿ ಪರಿಕರಗಳ ಪೂರೈಕೆ ಆಗಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.