ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಎಚ್ಚರಿಕೆ

ಪೋಷಣ್‌ ಮಾಸಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 10:47 IST
Last Updated 16 ಸೆಪ್ಟೆಂಬರ್ 2025, 10:47 IST
<div class="paragraphs"><p>ಪೋಷಣ್‌ ಮಾಸಾಚರಣೆ ಕಾರ್ಯಕ್ರಮದಲ್ಲಿ&nbsp;ಸಚಿವೆ ಲಕ್ಷ್ಮಿ&nbsp;ಹೆಬ್ಬಾಳಕರ ಮಾತನಾಡಿದರು</p></div>

ಪೋಷಣ್‌ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿದರು

   

ಬೆಳಗಾವಿ: ‘ಬಾಲ್ಯವಿವಾಹ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅನ್ಯಾಯವಾದರೆ, ನೇರವಾಗಿ ನನ್ನನ್ನು ಸಂಪರ್ಕಿಸಿ. ನಾನು ನೆರವಿಗೆ ನಿಲ್ಲುತ್ತೇನೆ. ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಎಚ್ಚರಿಕೆ ಕೊಟ್ಟರು.

ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೋಷಣ್‌ ಮಾಸಾಚರಣೆ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಸಾಧನ, ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ADVERTISEMENT

‘ಸಾಮಾಜಿಕ ಪಿಡುಗು ಆಗಿರುವ ಬಾಲ್ಯವಿವಾಹ ಪದ್ಧತಿ ವಿರುದ್ಧ ಎಲ್ಲರೂ ಹೋರಾಡಬೇಕು. ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆದಿರುವುದು ಕಂಡುಬಂದರೆ, ಅಂಗನವಾಡಿ ಕಾರ್ಯಕರ್ತೆಯರು ನಿರ್ಭೀತಿಯಿಂದ ಸಂಬಂಧಿತರಿಗೆ ಮಾಹಿತಿ ಕೊಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಬೇರು ಸಮೇತವಾಗಿ ಕಿತ್ತು ಹಾಕಲು ಎಲ್ಲರೂ ಸನ್ನದ್ಧರಾಗಬೇಕು’ ಎಂದರು.

‘ಸಮಾಜಕ್ಕೆ ಮಾರಕವಾಗಿರುವ ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮ ವಹಿಸಿದೆ. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗೆ ₹25 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದೆ’ ಎಂದು ಹೇಳಿದರು.

‘ಪ್ರತಿ ಗರ್ಭಿಣಿಯರಿಗೆ ಆರೋಗ್ಯವಂತ ಮಗು ಜನಿಸಲಿ ಎಂಬುದು ನಮ್ಮ ಆಶಯ. ಬೆಳಗಾವಿ ಮಾತ್ರವಲ್ಲ; ಇಡೀ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಒಂದು ತಿಂಗಳು ನಡೆಸಲಿದ್ದೇವೆ’ ಎಂದರು.

‘ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರಿಗೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಎಸಿಡಿಪಿಒ) ಹುದ್ದೆಗೆ ಬಡ್ತಿ ಕೊಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದೇನೆ. ಅಲ್ಲದೆ, ಬೇರೆ ಬೇರೆ ಹಂತಗಳಲ್ಲಿ ಕೆಲಸ ಮಾಡುತ್ತಿರುವ 400 ಜನರಿಗೆ ಅಂಗನವಾಡಿ ಮೇಲ್ವಿಚಾರಕರ ಹುದ್ದೆಗೆ ಒಂದು ಬಾರಿ ಸೇವಾಬಡ್ತಿ ನೀಡುವ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

‘ಸದೃಢವಾದ ಸಮಾಜ ನಿರ್ಮಿಸುವುದೇ ನಮ್ಮ ಇಲಾಖೆ ಗುರಿ. ಪೌಷ್ಟಿಕ ಮತ್ತು ತೀವ್ರ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಿ, ಆರೋಗ್ಯವಂತ ಮಕ್ಕಳನ್ನು ರೂಪಿಸಲು ಎಲ್ಲರೂ ಸನ್ನದ್ಧವಾಗಬೇಕು’ ಎಂದರು.

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಸಚಿವೆ ಹೆಬ್ಬಾಳಕರ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದಾರೆ. ಇಲಾಖೆ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಂಗನವಾಡಿ ಶಿಕ್ಷಕಿಯರು ಮತ್ತು ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು’ ಎಂದು ಕರೆಕೊಟ್ಟರು.

ಅಂಗವಿಕಲರಿಗೆ ಹೊಲಿಗೆ ಯಂತ್ರ, ಬ್ಯಾಟರಿಚಾಲಿತ ವ್ಹೀಲ್‌ಚೇರ್‌, ಬ್ರೈಲ್‌ಕಿಟ್‌, ಟಾಕಿಂಗ್‌ ಲ್ಯಾಪ್‌ಟಾಪ್‌ ಹಾಗೂ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಅಂಗನವಾಡಿ ಕೇಂದ್ರಗಳು ಆರಂಭವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ 50 ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು. ಪುಟಾಣಿಗಳ ವೇಷಭೂಷಣ ಸ್ಪರ್ಧೆ ಸಹ ಗಮನಸೆಳೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಜಿಲ್ಲಾ ನಿರೂಪಣಾಧಿಕಾರಿ ಅನಿಲ ಹೆಗಡೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವೀನ್‌ ಶೇಖ್‌, ಬೆಳಗಾವಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್‌.ರಾಮಮೂರ್ತಿ, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ, ಮುಖಂಡರಾದ ಶಂಕರಗೌಡ ಪಾಟೀಲ, ಯುವರಾಜ ಕದಂ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.