ADVERTISEMENT

ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯಕ್ಕಾಗಿ ಪತ್ರ ಅಭಿಯಾನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 13:00 IST
Last Updated 30 ಸೆಪ್ಟೆಂಬರ್ 2025, 13:00 IST
<div class="paragraphs"><p>ಅಶೋಕ ಪೂಜಾರಿ</p></div>

ಅಶೋಕ ಪೂಜಾರಿ

   

ಬೆಳಗಾವಿ: ‘ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗಾಗಿ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ, ಈ ಭಾಗದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ಪತ್ರ ಕಳುಹಿಸುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪತ್ರ ಕಳುಹಿಸುವುದಷ್ಟೇ ಅಲ್ಲ; ಪ್ರತ್ಯೇಕ ತಂಡಗಳ ಮೂಲಕ ಜನಪ್ರತಿನಿಧಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು. ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಲಾಗುವುದು’ ಎಂದರು.

ADVERTISEMENT

‘ಕಲ್ಯಾಣ ಕರ್ನಾಟಕದ ಜತೆಗೆ ನಾವೂ ಹೋರಾಟ ನಡೆಸಿ, ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದೇವೆ. ಆದರೆ, ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ಮಾತ್ರ ಕಾಣಿಸುತ್ತಿದೆಯೇ ಹೊರತು, ಕಿತ್ತೂರು ಕರ್ನಾಟಕವಲ್ಲ’ ಎಂದು ದೂರಿದರು.

‘ಕಿತ್ತೂರು ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ಕಲ್ಯಾಣ ಕರ್ನಾಟಕಕ್ಕೆ ನೀಡಿದಷ್ಟು ಪ್ರಾಮುಖ್ಯತೆ ಮತ್ತು ಅನುದಾನ ಕಿತ್ತೂರು ಕರ್ನಾಟಕಕ್ಕೆ ಸಿಕ್ಕಿಲ್ಲ’ ಎಂದು ಆರೋಪಿಸಿದರು.

‘ಕಿತ್ತೂರು ಕರ್ನಾಟಕದಲ್ಲಿ 55 ಶಾಸಕರಿದ್ದಾರೆ. ಈ ಭಾಗಕ್ಕೂ ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ. ವಿವಿಧ ಪ್ರಮುಖ ಇಲಾಖೆಗಳ ಕಾರ್ಯದರ್ಶಿಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿಕೇಂದ್ರವನ್ನಾಗಿ ಮಾಡಬೇಕು ಎಂಬ ಬೇಡಿಕೆ ನನೆಗುದಿಗೆ ಬಿದ್ದಿದೆ. ಹಾಗಾಗಿ ಪತ್ರ ಕಳುಹಿಸುವ ಅಭಿಯಾನದ ಮೂಲಕ ವಿಭಿನ್ನ ಹೋರಾಟ ಕೈಗೆತ್ತಿಕೊಂಡಿದ್ದೇವೆ’ ಎಂದು ಹೇಳಿದರು.

ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ, ನಾಗೇಶ ಗೋಳಶೆಟ್ಟಿ, ಅಡಿವೇಶ ಇಟಗಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.