ADVERTISEMENT

‘ಕ್ವಾರಂಟೈನ್’ ಇರುವವರ ನಿಗಾ ವಹಿಸಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 15:44 IST
Last Updated 4 ಏಪ್ರಿಲ್ 2020, 15:44 IST

ಬೆಳಗಾವಿ: ‘ಕ್ವಾರಂಟೈನ್‌ನಲ್ಲಿ ಇರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಹೊರಗಿನಿಂದ ಬಂದವರಾರೂ ಸ್ಟ್ಯಾಂಪಿಂಗ್‌ನಿಂದ ತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು. ಕರ್ತವ್ಯ ಲೋಪ ಎಸಗಿದರೆ ಅಥವಾ ನಿರ್ಲಕ್ಷ್ಯ ತೋರಿದರೆ ಅಂಥವರನ್ನು ತಕ್ಷಣ ಅಮಾನತು ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ನಡೆದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

‘ಪಡಿತರ ಧಾನ್ಯ ವಿತರಣೆ ಕಾರ್ಯ ಆರಂಭಗೊಂಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ವಹಿಸಬೇಕು. ಹಾಲು ವಿತರಣೆ ಹೊಣೆಗಾರಿಕೆಯನ್ನು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನೀಡಲಾಗಿದೆ. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಲಾಕ್‌ಡೌನ್ ಉಲ್ಲಂಘಿಸಿ ಜನಸಂದಣಿ ಕಂಡುಬಂದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಬೇಕು. ಸಹಜ ಸಾವು ಸಂಭವಿಸಿದರೂ ಮಾಹಿತಿ ಕಲೆ ಹಾಕಬೇಕು. ಸಂದೇಹಗಳಿದ್ದರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

‘ತರಕಾರಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಾಧ್ಯವಾದಷ್ಟು ಸ್ಥಳೀಯ ಮಾರುಕಟ್ಟೆಯಲ್ಲಿಯೇ ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್, ಪೊಲೀಸ್ ಆಯುಕ್ತ ಬಿ‌.ಎಸ್. ಲೋಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.