ADVERTISEMENT

ಲಾಕ್‌ಡೌನ್‌; ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 11:49 IST
Last Updated 5 ಏಪ್ರಿಲ್ 2020, 11:49 IST

ಬೆಳಗಾವಿ: ‘ಜಿಲ್ಲೆಯಲ್ಲಿ ಮೂರು ಕೋವಿಡ್–19 ಸೋಂಕು ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು’ ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಈಗಾಗಲೇ ಒಮ್ಮೆ ನೆಗೆಟಿವ್ ಬಂದಿರುವವರಿಗೆ ಕೆಲ ದಿನಗಳ ಬಳಿಕ ಮತ್ತೊಮ್ಮೆ ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು’ ಎಂದು ಸಚಿವರು ಮನವಿ ಮಾಡಿಕೊಂಡರು.

ADVERTISEMENT

‘ಗೋಕಾಕನಲ್ಲಿ ಈಗಾಗಲೇ ಎಲ್ಲ ಜಮಾತ್‌ಗಳ ಪ್ರತಿನಿಧಿಗಳ ಸಭೆ ನಡೆಸಿ ಲಾಕ್‌ಡೌನ್ ಪಾಲಿಸುವ ತ್ಯತೆ ಬಗ್ಗೆ ಮನವರಿಕೆ ಮಾಡಲಾಗಿದೆ’ ಎಂದು ಹೇಳಿದರು.

ಔಷಧಿ ಸಾಮಗ್ರಿಗಳ ಲಭ್ಯತೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಚಿವ ರಮೇಶ್ ಜಾರಕಿಹೊಳಿ ಅವರು, ನಗರದ ಹೊರವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಹೋಲ್‌ಸೇಲ್ ತರಕಾರಿ ಮಾರುಕಟ್ಟೆ ಸ್ಥಾಪನೆ ಹಾಗೂ ಮೂಲಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಚರ್ಚೆ ನಡೆಸಿದರು.

ರಾಯಬಾಗ, ಚಿಕ್ಕೋಡಿ, ಕುಡಚಿ ಸೇರಿದಂತೆ ವಿವಿಧ ಕಡೆಯ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಜಿಲ್ಲೆಯ ಎಲ್ಲ ಭಾಗಗಳ ಮೇಲೆ ನಿಗಾ ವಹಿಸುವಂತೆ ಸಚಿವರು ತಿಳಿಸಿದರು.

ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್‌ಗಾಗಿ ವಿವಿಧ ಕಡೆ ವಸತಿಗೃಹಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ವಿವರಿಸಿದರು.

‘ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ವಾರಂಟೈನ್ ನಲ್ಲಿ ಇರುವವರ ತಪಾಸಣೆ ಸೇರಿದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ವಿ.ಮುನ್ಯಾಳ ತಿಳಿಸಿದರು.

ಕಾನೂನು ಸುವ್ಯವಸ್ಥೆ ಪಾಲನೆ ಕುರಿತು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸಚಿವರಿಗೆ ಮಾಹಿತಿಯನ್ನು ನೀಡಿದರು.

ನಗರ ಪೊಲೀಸ್ ಆಯುಕ್ತರಾದ ಬಿ.ಎಸ್. ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.