
ಬೆಳಗಾವಿ: ‘ಸರ್ಕಾರಿ ಪ್ರೌಢಶಾಲೆಗಳಲ್ಲಿ ಇರುವ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಿ, 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆಯಲು ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗಮಟ್ಟದ ಸಂಪನ್ಮೂಲ ಶಿಕ್ಷಕರ ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಉತ್ತಮ ಶಿಕ್ಷಕರು ಇರುವುದೇ ಸರ್ಕಾರಿ ಶಾಲೆಗಳಲ್ಲಿ. ನಿಮ್ಮ ಪ್ರಯತ್ನ, ಸಹಕಾರದಿಂದ ಈ ಬಾರಿ ಫಲಿತಾಂಶ ಸುಧಾರಣೆಯಾಗಬೇಕು. ಶೇ 100ರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕು’ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ, ‘ಪರೀಕ್ಷೆ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಭಾಗಗಳಲ್ಲಿ ಶಿಕ್ಷಕರ ಕಾರ್ಯಾಗಾರ ಸಂಘಟಿಸುತ್ತಿದ್ದೇವೆ. ಇಲ್ಲಿ ಕಂಡುಕೊಂಡ ರಚನಾತ್ಮಕ ಅಂಶಗಳನ್ನು ಶಾಲೆಗಳಲ್ಲಿ ಅಳವಡಿಸಿಕೊಂಡು, ಶೇ 100ರಷ್ಟು ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು’ ಎಂದು ಕರೆಕೊಟ್ಟರು.
ಡಿಎಸ್ಇಆರ್‌ಟಿ ನಿರ್ದೇಶಕ ಎಚ್.ಎನ್.ಗೋಪಾಲಕೃಷ್ಣ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿದರು. ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಸ್ವಾಗತಿಸಿದರು. ಚಿಕ್ಕೋಡಿ ಡಿಡಿಪಿಐ ಆರ್.ಎಸ್.ಸೀತಾರಾಮು ವಂದಿಸಿದರು.
ಬೆಳಗಾವಿ, ಚಿಕ್ಕೋಡಿ, ಕಾರವಾರ, ಶಿರಸಿ ಶೈಕ್ಷಣಿಕ ವಲಯಗಳ ಸಂಪನ್ಮೂಲ ಶಿಕ್ಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.