ADVERTISEMENT

ಮಠಾಧೀಶರ ನೇತೃತ್ವದಲ್ಲಿ ಭಾರಿ ಪ್ರತಿಭಟನೆ

ವಿಟಿಯು ಇಬ್ಭಾಗ ಪ್ರಸ್ತಾವಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 19:30 IST
Last Updated 16 ಫೆಬ್ರುವರಿ 2019, 19:30 IST
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಬ್ಭಾಗ ಪ್ರಸ್ತಾವನೆ ವಿರೋಧಿಸಿ ಬೆಳಗಾವಿಯಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಬ್ಭಾಗ ಪ್ರಸ್ತಾವನೆ ವಿರೋಧಿಸಿ ಬೆಳಗಾವಿಯಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು   

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಇಬ್ಭಾಗ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆ ವಿರುದ್ಧ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಅವರ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಪಕ್ಷಾತೀತ ಭಾಗವಹಿಸಿದ್ದರು. ಸಾವಿರಾರು ವಿದ್ಯಾರ್ಥಿಗಳೂ ಪಾಲ್ಗೊಂಡಿದ್ದರು.

ಧರ್ಮವೀರ ಸಂಭಾಜಿ ವೃತ್ತದಿಂದ ಕಾಲೇಜ್‌ ರೋಡ್‌ ಮೂಲಕ ರಾಣಿ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವಿಶ್ವವಿದ್ಯಾಲಯವನ್ನು ಇಬ್ಭಾಗಿಸುವ ತಮ್ಮ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮಾಡಿಕೊಂಡ ಮನವಿಯನ್ನು ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿಗೆ ನೀಡಿದರು.

ಅಸ್ತಿತ್ವಕ್ಕೆ ಧಕ್ಕೆ:‘ವಿಟಿಯು ಬೆಳಗಾವಿ ಪ್ರತೀಕವಾಗಿದೆ. ಇದನ್ನು ಉಳಿಸಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇಬ್ಭಾಗಕ್ಕೆ ಅವಕಾಶ ಮಾಡಿಕೊಡಬಾರದು. ಈ ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಹೋರಾಡದಿದ್ದರೆ ನಮ್ಮ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಲಿದೆ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ADVERTISEMENT

ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮಾತನಾಡಿ, ‘ಕುಲಪತಿ ಪ್ರೊ. ಕರಿಸಿದ್ದಪ್ಪ ಅವರು ಹಾಸನದವರು ಹೀಗಾಗಿ, ವಿಶ್ವವಿದ್ಯಾಲಯವನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ. ಉತ್ತರ ಕರ್ನಾಟಕಕ್ಕೆ ಯೋಜನೆ ತರುವುದಷ್ಟೇ ಅಲ್ಲ, ಅದನ್ನು ಉಳಿಸಿಕೊಳ್ಳಲೂ ಹೋರಾಡಬೇಕಾದ ಪರಿಸ್ಥಿತಿ ಎದುರಾಗಿದೆ’ ಎಂದು ತಿಳಿಸಿದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ‘ಕುಮಾರಸ್ವಾಮಿ ಅವರು ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯುವವರೆಗೂ ಪ್ರತಿಭಟನೆ ನಡೆಸುತ್ತೇವೆ’ ಎಂದು ಹೇಳಿದರು.

ಪಕ್ಷಾತೀತ ಹೋರಾಟ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ವಿಟಿಯು ಉಳಿಸಿಕೊಳ್ಳಲು ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ. ರಾಜಕೀಯಕರಣಗೊಳಿಸಬಾರದು’ ಎಂದು ಹೇಳಿದರು.

ರಾಜೀನಾಮೆಗೆ ಸಿದ್ಧ: ‘ವಿಟಿಯು ಇಬ್ಭಾಗ ಮಾಡುವ ನಿರ್ಣಯವನ್ನು ಸರ್ಕಾರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ರಾಜೀನಾಮೆಗೆ ಸಿದ್ಧ’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ‘ಬೆಳಗಾವಿಯ ಶಕ್ತಿ ಕುಂದಿಸುವುದಕ್ಕಾಗಿಯೇ ವಿಟಿಯು ಇಬ್ಭಾಗ ಮಾಡಲಾಗಿದೆ’ ಎಂದು ಆರೋಪಿಸಿದರು.

ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ‘ಮೊನ್ನೆ ನಡೆದ ಬಜೆಟ್‌ ಅಧಿವೇಶನದಲ್ಲಿ ನಾವೆಲ್ಲ ಶಾಸಕರೂ ಈ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದೇವೆ. ತಕ್ಷಣ ಮುಖ್ಯಮಂತ್ರಿಯವರು ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು’ ಎಂದು ಆಗ್ರಹಿಸಿದರು.

ವಿಟಿಯು ವಿಭಜನೆ ಇಲ್ಲ: ಸಿ.ಎಂ

ಹಾಸನ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜಿಸುವ ಚಿಂತನೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಹಾಸನಕ್ಕೆ ತಾಂತ್ರಿಕ ವಿಶ್ವವಿದ್ಯಾಲಯ ಆಗಬೇಕು ಎನ್ನುವುದು ಎಚ್‌.ಡಿ.ರೇವಣ್ಣ ಭಾವನೆಯಾಗಿತ್ತು. ಹಾಗಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಆದರೆ, ಉತ್ತರ ಕರ್ನಾಟಕ ಭಾಗದ ಶಾಸಕರು ವಿ.ವಿ ವಿಭಜನೆ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಹೊರಟಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.