ADVERTISEMENT

ಬೆಳಗಾವಿ| ಗ್ಯಾರಂಟಿ’ ಅನುಷ್ಠಾನಕ್ಕೆ ಸಹಕರಿಸಿ: ನಿತೇಶ್‌ ಪಾಟೀಲ

ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ: ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 6:16 IST
Last Updated 24 ಆಗಸ್ಟ್ 2023, 6:16 IST
ಬೆಳಗಾವಿ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿದರು
ಬೆಳಗಾವಿ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿದರು    

ಬೆಳಗಾವಿ: ‘ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ವಿವಿಧ ತೆರಿಗೆಗಳ ಬಾಕಿ ವಸೂಲಾತಿ ಮತ್ತು ಸಮೀಕ್ಷೆಗಳನ್ನು ಪೂರ್ಣಗೊಳಿಸಬೇಕು. ಒತ್ತುವರಿಯಾದ ಜಮೀನು ವಶಕ್ಕೆ ಪಡೆಯಲು ಕ್ರಮ ವಹಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಮಳಿಗೆಗಳ ಲೀಸ್‌ ಅವಧಿ ನವೀಕರಣಗೊಳಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಜನರಿಂದ ಯಾವುದೇ ದೂರು ಬಂದರೆ, ತಕ್ಷಣವೇ ಸ್ಪಂದಿಸಬೇಕು. ಹೊಸ ಪಟ್ಟಣ ಪಂಚಾಯ್ತಿಗಳಿಗೆ ಗ್ರಾಮಗಳ ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು. ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಕಸ ವಿಲೇವಾರಿ ಪ್ರಕ್ರಿಯೆ ಸರಿಯಾಗಿ ನಡೆಯಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ 35 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವ ಕುರಿತು ಚರ್ಚಿಸಲಾಯಿತು. ‘202 ಕಾರ್ಮಿಕರ ನೇಮಕಕ್ಕೆ ಶೀಘ್ರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗುವುದು’ ಎಂದು ಡಿ.ಸಿ ನಿತೇಶ್ ಪಾಟೀಲ ತಿಳಿಸಿದರು.

ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಚಿಕ್ಕೋಡಿ ಉಪವಿಭಾಗಾಧಿಕಾರಿ ಮಾಧವ ಗಿತ್ತೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.