ADVERTISEMENT

ಬೆಳಗಾವಿ | ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥ: ನಾಲ್ವರು ನಿತ್ರಾಣ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 18:17 IST
Last Updated 22 ಜುಲೈ 2025, 18:17 IST
   

ಬೆಳಗಾವಿ: ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ನಾಲ್ವರು ಹೆಚ್ಚು ನಿತ್ರಾಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

‌ಎಲ್ಲ ಮಕ್ಕಳೂ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥರಾದರು. ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತು. ಶಿಕ್ಷಕರು ಒಬ್ಬೊಬ್ಬರನ್ನಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಸಾಮೂಹಿಕವಾಗಿ ಎಲ್ಲರಿಗೂ ಹೊಟ್ಟೆನೋವು ಕಾಣಿಸಿಕೊಳ್ಳಲು ಆರಂಭಿಸಿದ್ದರಿಂದ ಆಂಬುಲೆನ್ಸ್‌ಗಳನ್ನು ಕರೆಸಲಾಯಿತು.

ಡಿಡಿಪಿಐ ಲೀಲಾವತಿ ಹಿರೇಮಠ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ ಗಡಾದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

‘24 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿ, ಇನ್ನೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಾಯ ಏನೂ ಇಲ್ಲ’ ಎಂದು ಲೀಲಾವತಿ ಮಾಹಿತಿ ನೀಡಿದರು.

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಸಾಧ್ಯತೆ ಇದೆ ಎಂದು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

‘ಮಹಿಳಾ ಸ್ವಸಹಾಯ ಸಂಘದವರು ಅಡುಗೆ ಮಾಡಿದ್ದಾರೆ. ಘಟನೆ ಕುರಿತಾಗಿ ಬುಧವಾರ ಸಮಗ್ರವಾಗಿ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುತ್ತೇವೆ’ ಎಂದು ಪಿಎಂ– ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಬೆಳಗಾವಿ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.