ADVERTISEMENT

‘ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ’ಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 8:09 IST
Last Updated 30 ಆಗಸ್ಟ್ 2021, 8:09 IST
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ಹಮ್ಮಿಕೊಂಡಿರುವ ‘ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ’ವನ್ನು ಸಚಿವ ಕೆ.ಎಸ್. ಈಶ್ವರಪ್ಪ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಉದ್ಘಾಟಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ಹಮ್ಮಿಕೊಂಡಿರುವ ‘ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ’ವನ್ನು ಸಚಿವ ಕೆ.ಎಸ್. ಈಶ್ವರಪ್ಪ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಉದ್ಘಾಟಿಸಿದರು.   

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಎಚ್‌ಪಿಟಿ ಸಂಸ್ಥೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ‘ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ’ಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಗಾರದಲ್ಲಿ, ತಲಾ ₹25ಸಾವಿರ ಮೌಲ್ಯದ ಪರಿಕರಗಳು ಒಳಗೊಂಡ ‘ಕೋವಿಡ್ ನಿರ್ವಹಣೆ ಕಿಟ್‌’ಗಳನ್ನು ಕೆಲವು ಗ್ರಾಮ ಪಂಚಾಯ್ತಿಗಳ ಕಾರ್ಯಪಡೆಗಳಿಗೆ ಸಾಂಕೇತಿಕವಾಗಿ ವಿತರಿಸಿದರು. ‘ಕ್ಷಯ ಮುಕ್ತ ಗ್ರಾಮ ಪಂಚಾಯ್ತಿ’ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

‘ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಘೋಷಣೆಯಂತೆ, ಈ ಅಭಿಯಾನ ಕೈಗೊಳ್ಳಲಾಗಿದೆ. ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಇಒಗಳು ಕ್ರಮ ಕೈಗೊಳ್ಳಬೇಕು. ದೇಶದಲ್ಲೇ ಮಾದರಿ ಆಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್ ಮಾತನಾಡಿ, ‘ಗ್ರಾಮೀಣ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸೌಲಭ್ಯಗಳನ್ನು ಕಲ್ಪಿಸುವುದಕ್ಕಾಗಿ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಗದಗ, ಕಲಬುರ್ಗಿ, ಕೊಪ್ಪಳ, ಮಂಡ್ಯ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ 110 ತಾಲ್ಲೂಕುಗಳ 2,816 ಗ್ರಾಮ ಪಂಚಾಯ್ತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಈ ಪಂಚಾಯ್ತಿಗಳಿಗೆ 40ಸಾವಿರ ಕೋವಿಡ್ ನಿರ್ವಹಣೆ ಮತ್ತು ಆರೈಕೆ ಕಿಟ್‌ಗಳನ್ನು ವಿತರಿಸಲಾಗುವುದು. ಅದರಲ್ಲಿ ಥರ್ಮಲ್ ಸ್ಕ್ಯಾನ್ಸರ್, ಪಲ್ಸ್‌ ಆಕ್ಸಿಮೀಟರ್ ಸೇರಿದಂತೆ ಹಲವು ಪರಿಕರಗಳು ಇರುತ್ತವೆ. ಮಾಹಿತಿ, ಶಿಕ್ಷಣ ಹಾಗೂ ಸಂವಹನ ಸಾಮಗ್ರಿಗಳನ್ನೂ ಒಳಗೊಂಡಿರಲಿದೆ. ಇದನ್ನು ಪಂಚಾಯ್ತಿಗಳ ಕಾರ್ಯಪಡೆಗಳಿಗೆ ಕೊಡಲಾಗುವುದು. ಆಶಾ ಕಾರ್ಯಕರ್ತೆಯರು ಅವುಗಳನ್ನು ಬಳಸುತ್ತಾರೆ. ಇದಕ್ಕಾಗಿ ತರಬೇತಿಯನ್ನೂ ಕೊಡಲಾಗುವುದು. ಅವರು ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜನರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಇದಕ್ಕಾಗಿ ಅಮೆರಿಕದ ಯುಎಸ್‌ಎಐಡಿ ಸಹಯೋಗ ನೀಡಿದ್ದು, ₹ 7ಕೋಟಿ ಒದಗಿಸಿದೆ. ಕಿಟ್‌ಗಳ ಸದ್ಬಳಕೆಗೆ ಸಿಇಒಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.