ADVERTISEMENT

ಕೋವಿಡ್ ನಿಯಂತ್ರಣ ಕ್ರಮಕ್ಕೆ ಸೂಚನೆ

ಅಧಿಕಾರಿಗಳ ಸಭೆ ನಡೆಸಿದ ಸಚಿವ ಕತ್ತಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 13:45 IST
Last Updated 20 ಏಪ್ರಿಲ್ 2021, 13:45 IST
ಉಮೇಶ ಕತ್ತಿ
ಉಮೇಶ ಕತ್ತಿ   

ಬೆಳಗಾವಿ: ‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮರಣ ಪ್ರಮಾಣ ಹೆಚ್ಚದಂತೆ ನೋಡಿಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ತಿಳಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲ್ಲಿನ ಜನಪ್ರತಿನಿಧಿಯಾಗಿ ಜವಾಬ್ದಾರಿಯಿಂದ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೊರೊನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದೇನೆ. ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸುತ್ತೇನೆ. ಕೋವಿಡ್ ವಿಚಾರದಲ್ಲಿ ನಾವ್ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು.

‘ಜಿಲ್ಲಾ ಉಸ್ತುವಾರಿ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ. ಇಲ್ಲವಾದರೂ ಜವಾಬ್ದಾರಿಯಿಂದ ಸಭೆ ನಡೆಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಆದರೂ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಗೆಲ್ಲುತ್ತಾರೆ. ಒಂದೂವರೆಯಿಂದ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.