ADVERTISEMENT

ಕಾಕತಿ ಕೋಟೆ ಅಭಿವೃದ್ಧಿಗೆ ಕ್ರಮ: ಸೂಚನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 14:45 IST
Last Updated 12 ನವೆಂಬರ್ 2020, 14:45 IST
ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು
ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು   

ಬೆಳಗಾವಿ: ‘ವೀರ ರಾಣಿ ಕಿತ್ತೂರು ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿರುವ ವಾಡೆ, ಕೋಟೆ ಮತ್ತಿತರ ಸ್ಥಳಗಳ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ ಆದಷ್ಟು ಬೇಗನೆ ಜಾರಿಗೊಳಿಸಬೇಕು’ ಎಂದು ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು.

ತಾಲ್ಲೂಕಿನ ಕಾಕತಿಯ ಸಿದ್ದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಅರಮನೆ (ವಾಡೆ) ಇರುವ ಜಾಗವನ್ನು ಸರ್ಕಾರವೇ ಪಡೆದುಕೊಂಡು ಅದನ್ನು ಅಭಿವೃದ್ಧಿಪಡಿಸಬೇಕು. ನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಲಾದ ಚನ್ನಮ್ಮನ ಹುಟ್ಟೂರು ಕಾಕತಿ ಮತ್ತು ಕಿತ್ತೂರು ಸಮಗ್ರ ಅಭಿವೃದ್ಧಿಗೆ ಆದ್ಯತೆಯ ಮೇರೆಗೆ ಕೆಲಸ ಮಾಡಬೇಕು’ ಎಂದರು.

ADVERTISEMENT

‘ಕಾಕತಿಯಲ್ಲಿರುವ ಕೋಟೆಯು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದೆ. ಇಲಾಖೆಯವರೊಂದಿಗೆ ಚರ್ಚಿಸಿ ಕೋಟೆ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಿತ್ತೂರು, ಕಾಕತಿ ಅಭಿವೃದ್ಧಿಗೆ ಈಗಾಗಲೇ ಅನೇಕ ಕಾಮಗಾರಿಗಳನ್ನು ಜಾರಿಗೆ ತರಲಾಗಿದೆ. ಸಮಗ್ರ ಅಭಿವೃದ್ಧಿಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್‌ನಲ್ಲಿ ಅಳವಡಿಸಲಾಗಿದೆ’ ಎಂದು ತಿಳಿಸಿದರು.

ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ‘ಪ್ರಾಧಿಕಾರದಿಂದ ಈಗಾಗಲೇ ₹ 3.30 ಕೋಟಿ ವೆಚ್ಚದಲ್ಲಿ ವಾಡೆಯ ರಸ್ತೆ, ವಿದ್ಯುತ್ ದೀಪ ಅಳವಡಿಕೆ ಮತ್ತಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಬೆಳಗಾವಿ ಉಪ ವಿಭಾಗಾಧಿಕಾರಿ ಅಶೋಕ ತೇಲಿ, ರಾಚಯ್ಯ ಶಿವಪೂಜಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.