ADVERTISEMENT

ಬೆಳಗಾವಿ|ನೇಹ ಹತ್ಯೆ ಖಂಡಿಸಿ ಪ್ರತಿಭಟನೆ: ಫಯಾಜ್ ಪ್ರತಿಕೃತಿಗೆ ನೇಣು ಹಾಕಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 13:36 IST
Last Updated 23 ಏಪ್ರಿಲ್ 2024, 13:36 IST
ನೇಹಾ ಹಿರೇಮಠ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ನೇಹಾ ಹಿರೇಮಠ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೆಳಗಾವಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ನೇಹಾ ಕುಟುಂಬದವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಫಯಾಜ್ ಪ್ರತಿಕೃತಿಗೆ ನೇಣು ಹಾಕಿ, ಅದಕ್ಕೆ ಪಾದರಕ್ಷೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ಬೇರಾವ ವಿಷಯ ಇಲ್ಲ. ಇದರಿಂದ ಹತಾಶೆಗೊಂಡು, ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜನರು ಇದನ್ನೆಲ್ಲ ಗಮನಿಸುತ್ತಿದ್ದು, ಬಿಜೆಪಿ ಒಳ ಅಜೆಂಡಾ ಯಶಸ್ವಿಯಾಗದು’ ಎಂದರು.

ADVERTISEMENT

‘ಕೊಲೆ ಮಾಡಿದವನಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕೆಂದು ರಾಜ್ಯ ಸರ್ಕಾರ ವಿಶೇಷ ನ್ಯಾಯಾಲಯ ಸ್ಥಾಪಿಸಿದೆ. ಈ ವಿಷಯವನ್ನು ರಾಜಕೀಯ ಮಾಡಬೇಡಿ ಎಂದು ನೇಹಾ ಅವರ ತಂದೆಯೇ ಮನವಿ ಮಾಡಿದ್ದಾರೆ. ಆದರೂ, ಬಿಜೆಪಿಯವರು ಈ ಪ್ರಕರಣವನ್ನು ರಾಜಕೀಯಕ್ಕಾಗಿ ಬಳಸುತ್ತಿರುವುದನ್ನು ಖಂಡಿಸುತ್ತೇವೆ’ ಎಂದು ತಿಳಿಸಿದರು.

‘ರಾಜ್ಯ ಬರದಿಂದ ತತ್ತರಿಸಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ. ಮತಯಾಚನೆಗೆ ಹೋದಲ್ಲೆಲ್ಲ ಈ ಬಗ್ಗೆ ಬಿಜೆಪಿಯವರನ್ನು ಜನರು ಕೇಳುತ್ತಿದ್ದಾರೆ. ಇದರಿಂದ ದಿಕ್ಕು ತೋಚದಂತಾಗಿ ಬಿಜೆಪಿಯವರು, ನೇಹ ಪ್ರಕರಣವನ್ನೇ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ್ದು ಪ್ರಧಾನಿ ಕರ್ತವ್ಯ. ಅವರು ಬೇಜವಾಬ್ದಾರಿಯಿಂದ ಹೇಳಿಕೆ ಕೊಡಬಾರದು. ಮಹಿಳೆಯರ ರಕ್ಷಣೆಗೆ ಕಾನೂನು ಜಾರಿಗೊಳಿಬೇಕು’ ಎಂದು ಒತ್ತಾಯಿಸಿದರು.

ಶಾಸಕ ಆಸೀಫ್‌ ಸೇಠ್‌ ಮಾತನಾಡಿ, ‘ನೇಹಾ ಕೊಲೆ ಪ್ರಕರಣದಲ್ಲಿ ಬಿಜೆಪಿಯವರು ನಡೆದುಕೊಳ್ಳುತ್ತಿರುವ ರೀತಿ ಖಂಡನೀಯ’ ಎಂದು ದೂರಿದರು.

ಶಾಸಕ ಬಾಬಾಸಾಹೇಬ ಪಾಟೀಲ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ವಕೀಲ ಆರ್.ಪಿ.ಪಾಟೀಲ, ಜಯಶ್ರೀ ಮಾಳಗಿ, ಆಯೇಷಾ ಸನದಿ, ರೋಹಿಣಿ ಪಾಟೀಲ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.