
ಬೆಳಗಾವಿ: ‘ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್.1 ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಮ್ಲಜನಕ, ಐಸಿಯು ಸಹಿತ ಹಾಸಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜೆಎನ್.1 ನಿಯಂತ್ರಣಕ್ಕೆ ಅಗತ್ಯವಿರುವ ಪೂರ್ವಸಿದ್ಧತೆ ಕುರಿತ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿ ಅವರು, ‘ಗಡಿಭಾಗದಲ್ಲಿ ತಪಾಸಣೆ ಹೆಚ್ಚಿಸಬೇಕು. ಶ್ವಾಸಕೋಶ ಹಾಗೂ ಉಸಿರಾಟದ ತೀವ್ರ ಸಮಸ್ಯೆ ಇರುವವರನ್ನು ಕೊರೊನಾ ತಪಾಸಣೆಗೆ ಒಳಪಡಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕ ಕೊಠಡಿ ಸ್ಥಾಪಿಸಲು ಸೂಚಿಸಬೇಕು’ ಎಂದರು.
‘ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಧರಿಸಬೇಕು. ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯಾಧಿಕಾರಿ ಮತ್ತು ತಹಶೀಲ್ದಾರ್ ನಿರಂತರವಾಗಿ ಭೇಟಿ ನೀಡಿ, ಬೆಡ್‌ಗಳ ಲಭ್ಯತೆ ಕುರಿತು ಪರಿಶೀಲಿಸಬೇಕು’ ಎಂದೂ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ, ಜಿಲ್ಲಾ ಶಸ್ತ್ರಚಿಕಿತ್ಸಕ ವಿಠ್ಠಲ ಶಿಂಧೆ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡೇದ ಇದ್ದರು.
ಕುಷ್ಠರೋಗ ಪತ್ತೆ ಅಭಿಯಾನ 27ರಿಂದ
‘ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕುಗಳಲ್ಲಿ ಕುಷ್ಠರೋಗ ಪ್ರಕರಣ ಹೆಚ್ಚಾಗಿ ಕಂಡುಬಂದಿವೆ. ಆ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡು ಶೀಘ್ರವಾಗಿ ಪ್ರಕರಣ ಪತ್ತೆ ಹಚ್ಚಿ ತ್ವರಿತವಾಗಿ ಚಿಕಿತ್ಸೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
‘ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಡಿ.27ರಿಂದ 2024ರ ಜ.11ರವರೆಗೆ ನಡೆಯಲಿದೆ. ಈ ರೋಗದ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ ಜಿಲ್ಲಾ ಸಮೀಕ್ಷಾಧಿಕಾರಿ ಡಾ.ಸಂಜಯ ದೊಡ್ಡಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.