ADVERTISEMENT

ಬೆಳಗಾವಿಯಲ್ಲಿ ಎನ್‌ಎಂಪಿ ಘಟಕ ನಿರ್ಮಾಣ: ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 15:04 IST
Last Updated 29 ಅಕ್ಟೋಬರ್ 2021, 15:04 IST
ಬೆಳಗಾವಿಯಲ್ಲಿ ಬೆಮುಲ್‌ನಿಂದ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, ಶಾಸಕ ಅನಿಲ ಬೆನಕೆ, ಬೆಮುಲ್ ಅಧ್ಯಕ್ಷ ವಿವೇಕರಾವ್ ಪಾಟೀಲ ಹಾಗೂ ನಿರ್ದೇಶಕರು ಇದ್ದಾರೆಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಬೆಮುಲ್‌ನಿಂದ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, ಶಾಸಕ ಅನಿಲ ಬೆನಕೆ, ಬೆಮುಲ್ ಅಧ್ಯಕ್ಷ ವಿವೇಕರಾವ್ ಪಾಟೀಲ ಹಾಗೂ ನಿರ್ದೇಶಕರು ಇದ್ದಾರೆಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಬೆಳಗಾವಿಯಲ್ಲಿ ನಂದಿನಿ ಹಾಲಿನ ಉತ್ಪನ್ನಗಳ(ಎನ್‌ಎಂಪಿ) ತಯಾರಿಕಾ ಘಟಕ ಸ್ಥಾಪಿಸಲು ಯೋಜಿಸಲಾಗಿದೆ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿಯ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್‌) ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮುಲ್) ಸಹಯೋಗದಲ್ಲಿ ಇಲ್ಲಿನ ಮಹಾಂತೇಶ ನಗರದ ಒಕ್ಕೂಟದ ಆವರಣದಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ₹ 4.50 ಕೋಟಿ ವೆಚ್ಚದಲ್ಲಿ ವಸತಿನಿಲಯ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಎನ್‌ಎಂಪಿ ಘಟಕ ಸ್ಥಾಪನೆಗೆ ನಗರಲ್ಲಿ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ 40ರಿಂದ 50 ಎಕರೆ ಜಮೀನನ್ನು ಹುಡುಕಲಾಗುತ್ತಿದೆ. ಇಲ್ಲಿ ಘಟಕ ಸ್ಥಾಪನೆಯಾದರೆ ಪುಣೆ, ಮುಂಬೈ, ಗೋವಾ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮಾರುಕಟ್ಟೆಗಳಿಗೆ ‘ನಂದಿನಿ’ ಉತ್ಪನ್ನಗಳನ್ನು ತ್ವರಿತವಾಗಿ ಪೂರೈಕೆ ಮಾಡಲು ಅನುಕೂಲವಾಗುತ್ತದೆ. ಇದರಿಂದ ಮಾರುಕಟ್ಟೆ ಅಭಿವೃದ್ಧಿಯೂ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ADVERTISEMENT

ಎಲ್ಲ ಒಕ್ಕೂಟಗಳಲ್ಲೂ:‘ಹಾಲು ಉತ್ಪಾದಕರ ಮಕ್ಕಳಿಗೆ ವಸತಿನಿಲಯ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಒಂದು ವರ್ಷದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಇಲ್ಲಿ ತಲಾ 50 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಸೇರಿ 100 ಮಂದಿಗೆ ವಿದ್ಯಾಭ್ಯಾಸಕ್ಕಾಗಿ ಅನುಕೂಲ ಮಾಡಿಕೊಡಲಾಗುತ್ತದೆ. ಈ ಮೂಲಕ ಹಾಲು ಉತ್ಪಾದಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗುವುದು. ಇದರಂತೆಯೇ ರಾಜ್ಯದಲ್ಲಿರುವ ಎಲ್ಲ 14 ಹಾಲು ಒಕ್ಕೂಟಗಳಲ್ಲೂ ಹಾಲು ಉತ್ಪಾದಕರ ಮಕ್ಕಳಿಗೆ ವಸತಿನಿಲಯ ಸ್ಥಾಪಿಸಲಾಗುವುದು. ಈ ಮೂಲಕ ವರ್ಷದಲ್ಲಿ ರಾಜ್ಯದ 1,400 ಮಕ್ಕಳಿಗೆ ವಸತಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ’ ಎಂದರು.

‘ಜಿಲ್ಲೆಯಲ್ಲಿ ನಿತ್ಯ 15 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಈ ಪೈಕಿ 2 ಲಕ್ಷ ಲೀಟರ್ ಹಾಲು ಮಾತ್ರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಕ್ಕೆ ಬರುತ್ತಿದೆ. ಖಾಸಗಿಯವರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಹೆಚ್ಚಿನ ದರ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಒಕ್ಕೂಟಕ್ಕೆ ಹಾಲು ಬರುವಂತೆ ಒಕ್ಕೂಟದ ಆಡಳಿತ ಮಂಡಳಿಯವರು ಮತ್ತು ಅಧಿಕಾರಿಗಳು ಶ್ರಮಿಸಬೇಕು. ಹೈನುಗಾರರನ್ನು ಆಕರ್ಷಿಸಬೇಕು’ ಎಂದು ಸೂಚಿಸಿದರು.

ಎಲ್ಲರೂ ಸುಖವಾಗಿರಬೇಕು:‘ರೈತರಿಗೆ ಹೆಚ್ಚಿನ ದರ ನೀಡಿ ಆಕಳು ಮತ್ತು ಎಮ್ಮೆ ಹಾಲನ್ನು ಖರೀದಿಸಬೇಕು. ಎಲ್ಲ ಒಕ್ಕೂಟಗಳಿಂದ ಹಾಲು ಖರೀದಿಗೆ ಒಂದೇ ದರ ನಿಗದಿಪಡಿಸಲು ಪ್ರಯತ್ನಿಸಲಾಗುವುದು. ಮುಂದಿನ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ರೈತರು, ಗ್ರಾಹಕರು, ನೌಕರರು ಎಲ್ಲರೂ ಸುಖವಾಗಿರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಬೆಮುಲ್ ಡೈರಿ ಬಳಿಯಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬೆಮುಲ್‌ನ ಅರ್ಧ ಗುಂಟೆ ಜಾಗೆಯನ್ನು ನೀಡಿ ಗ್ರಂಥಾಲಯ ಕಟ್ಟಡ ನಿರ್ಮಿಸಬೇಕು. ಈ ಬಡಾವಣೆಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು’ ಎಂದು ಕೋರಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಾಲಚಂದ್ರ, ‘ನಿವೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಮುಲ್ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ನಗರಪಾಲಿಕೆ ಸದಸ್ಯ ರಾಜಶೇಖರ ಡೋಣಿ, ಜಿಲ್ಲಾ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ. ಶ್ರೀನಿವಾಸನ್, ನಿರ್ದೇಶಕರು ಪಾಲ್ಗೊಂಡಿದ್ದರು.

ಆರ್ಥಿಕವಾಗಿ ಸಬಲರಾಗಬೇಕು
ಉತ್ತರ ಕರ್ನಾಟಕದ ರೈತರು ಕಬ್ಬು ಬೆಳೆಯನ್ನು ಅವಲಂಬಿಸಿದ್ದಾರೆ. ಕಬ್ಬಿನ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಈ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಈ ನಿಟ್ಟಿನಲ್ಲಿ ದಕ್ಷಿಣ ಕರ್ನಾಟಕದವರು ಮಾದರಿಯಾಗಿದ್ದಾರೆ.
–ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.