ADVERTISEMENT

‘ಕೃಷಿ ಉತ್ಪನ್ನ, ಬೀಜ-ಗೊಬ್ಬರ ಮಾರಾಟ, ಸಾಗಾಣಿಕೆಗೆ ನಿರ್ಬಂಧವಿಲ್ಲ’

ಲಾಕ್ ಡೌನ್: ಕೃಷಿ ಸಚಿವ ಬಿ.ಸಿ.ಪಾಟೀಲ ಸಭೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 14:07 IST
Last Updated 6 ಏಪ್ರಿಲ್ 2020, 14:07 IST
ಬೆಳಗಾವಿಯಲ್ಲಿ ಸೋಮವಾರ ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಉಪಸ್ಥಿತರಿದ್ದರು
ಬೆಳಗಾವಿಯಲ್ಲಿ ಸೋಮವಾರ ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಉಪಸ್ಥಿತರಿದ್ದರು   

ಬೆಳಗಾವಿ: ‘ಲಾಕ್‌ಡೌನ್ ಸಂದರ್ಭದಲ್ಲಿ ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳ ಬಾರದು. ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆಗೆ ವ್ಯತ್ಯಯವಾಗದಂತೆ ಎಲ್ಲ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕೃಷಿ ಇಲಾಖೆಯ ಸಚಿವ ಬಿ.ಸಿ.ಪಾಟೀಲ ಸೂಚನೆ ನೀಡಿದರು.

ಕೋವಿಡ್ -19 ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ವಿಷಯಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ಅನಾನುಕೂಲ ಆಗಕೂಡದು. ಬಿತ್ತನೆ, ಬೀಜ-ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟ, ಸಾಗಾಣಿಕೆ ಸಮರ್ಪಕವಾಗಿ ಇರಬೇಕು. ಕೃಷಿ ಯಂತ್ರೋಪಕರಣಗಳು ಮತ್ತಿತರ ಸಾಮಗ್ರಿಗಳ ಮಾರಾಟ ವ್ಯವಸ್ಥೆಯನ್ನು ಯಥಾಪ್ರಕಾರ ಕಲ್ಪಿಸಬೇಕು’ ಎಂದು ಹೇಳಿದರು.

ADVERTISEMENT

‘ಸರಕು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿಲ್ಲ. ಒಂದು ವೇಳೆ ಎಲ್ಲಿಯಾದರೂ ಸರಕು ಸಾಮಗ್ರಿಗಳನ್ನು ಸಾಗಿಸುವ ವಾಹನಗಳಿಗೆ ತಡೆಯೊಡ್ಡಿದರೆ ಸರ್ಕಾರ ಮತ್ತು ಜಿಲ್ಲಾಡಳಿತದ ಗಮನಕ್ಕೆ ತಂದರೆ ಸಮಸ್ಯೆ ಪರಿಹರಿಸಲಾಗುವುದು’ ಎಂದು ತಿಳಿಸಿದರು.

ಹಕ್ಕಿಜ್ವರ ಕಂಡುಬಂದಿಲ್ಲ:

‘ರಾಜ್ಯದಲ್ಲಿ ಕೋಳಿ ಅಥವಾ ಹಕ್ಕಿಜ್ವರ ವರದಿಯಾಗಿಲ್ಲ. ಆದ್ದರಿಂದ ಕೋಳಿ ಮಾಂಸ ತಿಂದರೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ’ ಎಂದು ಸಚಿವ ಬಿ.ಸಿ.ಪಾಟೀಲ ಸ್ಪಷ್ಟಪಡಿಸಿದರು.

‘ವ್ಯಾಪಾರ, ವಹಿವಾಟು ನಡೆಸಲು ಯಾವುದೇ ರೀತಿಯ ಸಮಯ ನಿರ್ಬಂಧ ವಿಧಿಸಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸಾಮಾಜಿಕ ಆರೋಗ್ಯದ ದೃಷ್ಟಿಯಿಂದ ಲಾಕ್ ಡೌನ್ ಜಾರಿಗೆ ತರಲಾಗಿದೆ. ಅನಿವಾರ್ಯವಾಗಿ ಕೆಲವೊಂದು ನಿರ್ಬಂಧ ವಿಧಿಸಲಾಗಿದ್ದು ಜನರು ಸಹಕರಿಸಬೇಕು’ ಎಂದು ಮನವಿ ಮಾಡಿಕೊಂಡರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ನೆರೆಯ ರಾಜ್ಯಗಳಿಗೆ ಪೂರೈಕೆಯಾಗುವ ಹಣ್ಣು- ತರಕಾರಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ಸರಾಗವಾಗಿ ಸಾಗಿಸಲು ಆಯಾ ರಾಜ್ಯದ ಗಡಿಯ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು’ ಎಂದು ತಿಳಿಸಿದರು.

‘ಈ ಬಗ್ಗೆ ಈಗಾಗಲೇ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ಅನೇಕ ಬಾರಿ ಚರ್ಚಿಸಲಾಗಿದೆ. ಆದಾಗ್ಯೂ ಸಮಸ್ಯೆ ಉದ್ಭವಿಸಿದಾಗ ತಮ್ಮ ಗಮನಕ್ಕೆ ತಂದರೆ ಮತ್ತೆ ಮಾತನಾಡುತ್ತೇನೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದರು.

‘ಜಿಲ್ಲೆಯಲ್ಲಿ ಮೇ ಕೊನೆಯ ಅಥವಾ ಜೂನ್ ನಲ್ಲಿ ಬಿತ್ತನೆ ಕಾರ್ಯ ಆರಂಭವಾಗುತ್ತದೆ. ಶೇ 50ರಷ್ಟು ರಸಗೊಬ್ಬರ ದಾಸ್ತಾನು ಇದೆ. 40 ಸಾವಿರ ಕ್ವಿಂಟಲ್ ಬಿತ್ತನೆ ಬೀಜ ಅಗತ್ಯವಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ತಿಳಿಸಿದರು.

‘ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ, ಮತ್ತಿತರ ಸಾಮಗ್ರಿಗಳ ಪೂರೈಕೆ ಅಥವಾ ಸಾಗಾಣಿಕೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳು ಕೂಡ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.

‘ಹಾಪ್ ಕಾಮ್ಸ್ ಮತ್ತು ತೋಟಗಾರಿಕೆ ಇಲಾಖೆಯ ಮೂಲಕ 100ಕ್ಕೂ ಅಧಿಕ ವಾಹನಗಳನ್ನು ಬಳಸಿಕೊಂಡು ನಗರದಲ್ಲಿರುವ ಬಡಾವಣೆಗಳಿಗೆ ಹಣ್ಣು-ತರಕಾರಿ ಪೂರೈಸಲಾಗುತ್ತಿದೆ’ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ ತಿಳಿಸಿದರು.

‘ಜಿಲ್ಲೆಯಲ್ಲಿ 1 ಲಕ್ಷ ಟನ್ ಗೊಬ್ಬರ ಅಗತ್ಯವಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ರೈತ ಮುಖಂಡರಾದ ಸಿದ್ದಗೌಡ ಮೋದಗಿ ಮನವಿ ಮಾಡಿಕೊಂಡರು.
ಪಿಓಎಸ್ ಮೂಲಕ ಗೊಬ್ಬರ ಪೂರೈಸುವಾಗ ಬೆರಳಚ್ಚು ಹಾಗೂ ಓಟಿಪಿ ವ್ಯವಸ್ಥೆಗೆ ತಾತ್ಕಾಲಿಕ ರಿಯಾಯಿತಿ ನೀಡಬೇಕು ಎಂದರು.

ಶಾಸಕ ಸತೀಶ ಜಾರಕಿಹೊಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ,ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.