ADVERTISEMENT

ಕಾಂಗ್ರೆಸ್‌ನಲ್ಲಿ ಯಾರನ್ನೂ ಮೂಲೆ ಗುಂಪು ಮಾಡಲ್ಲ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 9:57 IST
Last Updated 2 ಮಾರ್ಚ್ 2021, 9:57 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ಕಾಂಗ್ರೆಸ್‌ನಲ್ಲಿ ಯಾರು ಯಾರನ್ನೂ ಮೂಲೆ ಗುಂಪು ಮಾಡಲು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಗೋಕಾಕ ಸೇರಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಲು ಜಿಲ್ಲೆಯ ಕಾಂಗ್ರೆಸ್ ಎಲ್ಲ ಶಾಸಕರು ಹಾಗೂ ಮುಖಂಡರು ಜಂಟಿಯಾಗಿ ಕೆಲಸ ಮಾಡುತ್ತಿದ್ದೇವೆ. ಆಯಾ ಕ್ಷೇತ್ರದಲ್ಲಿ ಸಂಘಟನೆಗೆ ಹೋದಾಗ ಅಲ್ಲಿನ ನಮ್ಮ ಶಾಸಕರು ಹಾಗೂ ನಾಯಕರು ಜೊತೆಯಲ್ಲಿರುತ್ತಾರೆ. ಉಳಿದಂತೆ, ಶಾಸಕರು ಅವರವರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ನನಗೆ ಹೆಚ್ಚಿನ ಜವಾಬ್ದಾರಿ ಇದೆ’ ಎಂದರು.

ADVERTISEMENT

‘ಗ್ರಾಮೀಣ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಸ್ತಕ್ಷೇತ್ರ ಮಾಡಿದರೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಕೆಡಿಪಿ ಸಭೆಯಲ್ಲಿ ಪ್ರಶ್ನಿಸುವ ಅವಕಾಶವಿದೆ’ ಎಂದು ಪ್ರತಿಕ್ರಿಯಿಸಿದರು.

‘ಮಹದಾಯಿ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ನಮ್ಮ ಪಾಲಿನ ನೀರು ಪಡೆಯುವುದಕ್ಕೆ ನಾನಾ ಇಲಾಖೆಯ ಅನುಮತಿ ಬೇಕಿದೆ. ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಚುನಾಚಣೆ ಬಂದಾಗ ಬಿಜೆಪಿ‌ಯವರು ಮಹದಾಯಿ ವಿಷಯ ಪ್ರಸ್ತಾಪಿಸುವುದು ಹೊಸದೇನಲ್ಲ. ಹಿಂದಿನಿಂದಲೂ ಆ ಕೆಲಸ ಮಾಡಿಕೊಂಡೇ ಬರಲಾಗುತ್ತಿದೆ’ ಎಂದು ಹೇಳಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಯಾರಾರ ಹೆಸರು ಕಳುಹಿಸಲಾಗಿದೆಯೋ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.