ADVERTISEMENT

ಅಧಿಸೂಚನೆ ಪ್ರಕಟ: ಗರಿಗೆದರಿದ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 14:42 IST
Last Updated 8 ಡಿಸೆಂಬರ್ 2021, 14:42 IST

ಬೆಳಗಾವಿ: ಚುನಾಯಿತ ಪ್ರತಿನಿಧಿಗಳ ಅಧಿಕಾರದ ಅವಧಿ ಪೂರ್ಣಗೊಂಡಿರುವ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಆಯ್ಕೆಗೆ ಡಿ. 27ರಂದು ಮತದಾನ ನಡೆಯಲಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ಇದರೊಂದಿಗೆ ನಗರ ಮತ್ತು ಪಟ್ಟಣಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಈ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಕಾಂಕ್ಷಿಗಳು ಸಿದ್ಧತೆ ಆರಂಭಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆ ಮುಗಿಯುತ್ತಿದ್ದಂತೆಯೇ, ಮತ್ತೊಂದು ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ.

ADVERTISEMENT

ಡಿ.15–ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.16ರಂದು ಪರಿಶೀಲನೆ ನಡೆಯಲಿದೆ. ಡಿ.18– ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಡಿ.30ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಚುನಾವಣೆ ನಿಗದಿಯಾಗಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಡಿ.8ರಿಂದ ಡಿ.30ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಅಭ್ಯರ್ಥಿಗಳಿಗೆ ನಗರಸಭೆಗೆ ತಲಾ ₹ 2 ಲಕ್ಷ, ಪುರಸಭೆಗಳಲ್ಲಿ ₹1.50 ಲಕ್ಷ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ₹1 ಲಕ್ಷ ವೆಚ್ಚದ ಮಿತಿ ನಿಗದಿಪಡಿಸಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.