ADVERTISEMENT

ಮತ್ತೊಮ್ಮೆ ಮೋದಿ; ಬಿಜೆಪಿ ಯುವಮೋರ್ಚಾ ಪಣ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 16:40 IST
Last Updated 3 ಜನವರಿ 2019, 16:40 IST

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಪುನಃ ನರೇಂದ್ರ ಮೋದಿ ಅವರನ್ನೇ ಪ್ರಧಾನಿಯನ್ನಾಗಿಸಲಾಗುವುದು ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು ಹಾಗೂ ರಾಜ್ಯದ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಪ್ರತಿಯೊಬ್ಬ ಮತದಾರರ ಮನೆಗೆ ತಲುಪಿಸುವ ಸಲುವಾಗಿ ರಾಜ್ಯದಾದ್ಯಂತ ವಿಜಯ ಲಕ್ಷ್ಯ– 2019 ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

2014ರಲ್ಲಿ ಮೋದಿ ಅವರು ಪ್ರಧಾನಿ ಹುದ್ದೆಗೇರುವ ಸಂದರ್ಭದಲ್ಲಿ ದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿತ್ತು. ಕೇಂದ್ರದ ಯುಪಿಎ ಸರ್ಕಾರವು ಹಲವು ಹಗರಣಗಳಲ್ಲಿ ಸಿಲುಕಿಕೊಂಡಿತ್ತು. ಆದರೆ, ಈಗ ಮೋದಿ ಅವರು ಅಧಿಕಾರ ವಹಿಸಿಕೊಂಡ ನಾಲ್ಕುವರೆ ವರ್ಷಗಳ ನಂತರ ದೇಶದ ಚಿತ್ರಣ ಬದಲಾಗಿ ಹೋಗಿದೆ. ದೇಶವು ಅಭಿವೃದ್ಧಿ ಪಥದತ್ತ ಚಲಿಸುತ್ತಿದೆ ಎಂದು ಹೇಳಿದರು.

ADVERTISEMENT

₹ 500 ಹಾಗೂ ₹ 1,000 ನೋಟುಗಳ ಅಮಾನ್ಯಗೊಳಿಸಿರುವುದು ಹಾಗೂ ಜಿಎಸ್‌ಟಿ ಜಾರಿ ಮಾಡಿರುವುದರಿಂದ ದೇಶದ ಆರ್ಥಿಕ ಪ್ರಗತಿ ಏರಿಕೆ ಕಂಡಿದೆ. ಇನ್ನೊಂದೆಡೆ, ರಾಜ್ಯದ ಸಮ್ಮಿಶ್ರ ಸರ್ಕಾರವು ಇನ್ನೂ ಟೇಕಾಫ್‌ ಆಗಿಲ್ಲ. ಸರ್ಕಾರ ರಚನೆಯಾಗಿ ಏಳು ತಿಂಗಳು ಕಳೆದರೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಅನುದಾನ ಬಿಡುಗಡೆಯಾಗಿಲ್ಲ ಎಂದು ನುಡಿದರು.

ಅಧಿವೇಶನದಲ್ಲಿ ಚರ್ಚೆಯಿಲ್ಲ; ರಾಜ್ಯದ 100 ತಾಲ್ಲೂಕುಗಳಲ್ಲಿ ಬರ ಆವರಿಸಿದೆ. 1,000 ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಕೊರತೆ ಕಂಡುಬಂದಿದೆ. ಉತ್ತರ ಕರ್ನಾಟಕದಲ್ಲಿ ಹಲವು ಸಮಸ್ಯೆಗಳಿವೆ. ಇವುಗಳ ಬಗ್ಗೆ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಸ್ಥಿರಗೊಳಿಸಲ್ಲ; ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲವೆಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಈಗಾಗಲೇ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ ಅವರ ಕೈಗಳನ್ನು ಬಲಪಡಿಸಲಾಗುವುದು ಎಂದು ಅವರು ಹೇಳಿದರು.

ಶಾಸಕ ಅನಿಲ ಬೆನಕೆ, ಮುಖಂಡರಾದ ಸಂಜಯ ಪಾಟೀಲ, ಶಂಕರಗೌಡ ಪಾಟೀಲ, ರಾಜೇಂದ್ರ ಹರಕುಣಿ, ರಾಜು ಚಿಕ್ಕನಗೌಡರ, ವಿಶ್ವನಾಥ ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.