ADVERTISEMENT

ಆನ್‌ಲೈನ್‌ ಔಷಧ ಮಾರಾಟದ ಮೇಲೆ ನಿಯಂತ್ರಣಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 13:59 IST
Last Updated 2 ಮಾರ್ಚ್ 2019, 13:59 IST
ಬೆಳಗಾವಿಯಲ್ಲಿ ಶನಿವಾರ ಉಪಔಷಧ ನಿಯಂತ್ರಕರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅಭಯ ಪಾಟೀಲ,  ಆರೋಗ್ಯ ಸಚಿವ ಶಿವಾನಂದ ಪಾಟೀಲ, ಉಪಮೇಯರ್‌ ಮಧುಶ್ರೀ ಪೂಜಾರಿ, ಅರಣ್ಯ ಸಚಿವ ಸತೀಶ ಜಾರಕಿಹೊಳಿ ಭಾಗವಹಿಸಿದ್ದರು
ಬೆಳಗಾವಿಯಲ್ಲಿ ಶನಿವಾರ ಉಪಔಷಧ ನಿಯಂತ್ರಕರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅಭಯ ಪಾಟೀಲ,  ಆರೋಗ್ಯ ಸಚಿವ ಶಿವಾನಂದ ಪಾಟೀಲ, ಉಪಮೇಯರ್‌ ಮಧುಶ್ರೀ ಪೂಜಾರಿ, ಅರಣ್ಯ ಸಚಿವ ಸತೀಶ ಜಾರಕಿಹೊಳಿ ಭಾಗವಹಿಸಿದ್ದರು   

ಬೆಳಗಾವಿ: ‘ಆನ್‌ಲೈನ್‌ನಲ್ಲಿ ಔಷಧ ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಶನಿವಾರ ಉಪಔಷಧ ನಿಯಂತ್ರಕರ ಕಚೇರಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರಂಭಿಸಿರುವ ಜೆನರಿಕ್‌ ಔಷಧ ಮಳಿಗೆಗಳಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಹಾಯವಾಗಿದೆ’ ಎಂದರು.

ಮಂಗನ ಕಾಯಿಲೆ ನಿರೋಧಕ ಲಸಿಕೆ ತಯಾರಿಸಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ₹ 10 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಿಸಲಾಗುವುದು. ಲಸಿಕೆ ನೀಡಿದ 60 ದಿನಗಳ ನಂತರ ರೋಗ ನಿರೋಧಕ ಶಕ್ತಿ ನಿರ್ಮಾಣವಾಗುತ್ತದೆ. ಮಂಗನ ಕಾಯಿಲೆ ನಿಯಂತ್ರಿಸುವಲ್ಲಿ ಇದು ಮಹತ್ತರ ಪಾತ್ರ ನಿರ್ವಹಿಸಲಿದೆ ಎಂದು ತಿಳಿಸಿದರು.

ADVERTISEMENT

ಕಳೆದ ವರ್ಷ ಲಸಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಯೇ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಂಗನ ಕಾಯಿಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಹೇಳಿದರು.

ಅರಣ್ಯ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ‘ಆನ್‌ಲೈನ್‌ನಲ್ಲಿ ಔಷಧ ಮಾರಾಟ ಮಾಡದಂತೆ ಹಲವು ಜನರು ಮನವಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.

ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರದಿಂದ ಆನ್‌ಲೈನ್‌ ಮೂಲಕ ಔಷಧ ಮಾರಾಟ ತಡೆಯಲು ಸೂಕ್ತ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ‘ಬೆಳಗಾವಿಯಲ್ಲಿ ದೊಡ್ಡ ದೊಡ್ಡ ಕಂಪನಿಗಳು ಔಷಧ ಮಾರಾಟ ಮಾಡುತ್ತಿರುವುದರಿಂದ ಸಣ್ಣ ವ್ಯಾಪಾರಸ್ಥರಿಗೆ ನಷ್ಟ ಉಂಟಾಗುತ್ತಿದೆ. ಅನುಮತಿ ನೀಡುವ ಸಂದರ್ಭದಲ್ಲಿ ಸ್ಥಳೀಯ ವ್ಯಾಪಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.