ADVERTISEMENT

ಶಿಕ್ಷಕರ ಕಡ್ಡಾಯ ವರ್ಗಾವಣೆಗೆ ವಿರೋಧ

ಖಾಸಬಾಗದ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಸದಸ್ಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 11:37 IST
Last Updated 21 ಜೂನ್ 2019, 11:37 IST
ಸರ್ಕಾರಿ ಶಾಲೆಗಳ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮವನ್ನು ಕೈಬಿಡುವಂತೆ ಒತ್ತಾಯಿಸಿ ಬೆಳಗಾವಿಯ ಖಾಸಬಾಗದ ಸರ್ಕಾರಿ ಶಾಲೆ ನಂ.3ರ ಎಸ್‌ಡಿಎಂಸಿ ಸದಸ್ಯರು ಹಾಗೂ ಪಾಲಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು
ಸರ್ಕಾರಿ ಶಾಲೆಗಳ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮವನ್ನು ಕೈಬಿಡುವಂತೆ ಒತ್ತಾಯಿಸಿ ಬೆಳಗಾವಿಯ ಖಾಸಬಾಗದ ಸರ್ಕಾರಿ ಶಾಲೆ ನಂ.3ರ ಎಸ್‌ಡಿಎಂಸಿ ಸದಸ್ಯರು ಹಾಗೂ ಪಾಲಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು   

ಬೆಳಗಾವಿ: ಸರ್ಕಾರಿ ಶಾಲೆಗಳ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮವನ್ನು ಕೈಬಿಡುವಂತೆ ಒತ್ತಾಯಿಸಿ ಇಲ್ಲಿನ ಖಾಸಬಾಗದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.3ರ ಎಸ್‌ಡಿಎಂಸಿ ಸದಸ್ಯರು ಹಾಗೂ ಪಾಲಕರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ವಕೀಲ ಬಸವರಾಜ ರೊಟ್ಟಿ ಮಾತನಾಡಿ, ‘ಕಡ್ಡಾಯ ವರ್ಗಾವಣೆಯಿಂದ ಅನೇಕ ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಶಾಲೆಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ, ಸರ್ಕಾರ ಈ ಆದೇಶವನ್ನು ಹಿಂಪಡೆದು ಸ್ವಯಂ ವರ್ಗಾವಣೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.

ವರ್ಗಾವಣೆಗೆ ಆಕ್ರೋಶ:‘ಖಾಸಬಾಗದಲ್ಲಿರುವ ಸರ್ಕಾರಿ ಶಾಲೆ ನಂ.3ರಲ್ಲಿ ಕಳೆದ ಅನೇಕ ವರ್ಷಗಳಿಂದ ಉತ್ತಮವಾಗಿ ಬೋಧನೆ ಮಾಡುತ್ತಿರುವ ಶಿಕ್ಷಕರು ಈ ಆದೇಶದಿಂದ ಬೇರೆಡೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರ ಏಕಾಏಕಿ ಆದೇಶ ಹೊರಡಿಸಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜೆ.ಎಸ್‌. ಯಕ್ಕುಂಡಿ ಮಾತನಾಡಿ, ‘ಶಾಲೆಯಲ್ಲಿ 5 ವರ್ಷಗಳ ಹಿಂದೆ ವಿದ್ಯಾರ್ಥಿಗಳ ಸಂಖ್ಯೆ ಕೇವಲ 150 ಮಾತ್ರ ಇತ್ತು. ಸದ್ಯ 700 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಮಕ್ಕಳ ಸಂಖ್ಯೆ ಹೆಚ್ಚಿಸಲು ಇಲ್ಲಿನ ಶಿಕ್ಷಕರು ಸಾಕಷ್ಟು ಶ್ರಮವಹಿಸಿದ್ದಾರೆ. ಪ್ರತಿ ಮನೆಮನೆಗೆ ತೆರಳಿ ಪಾಲಕರಿಗೆ ಸರ್ಕಾರಿ ಶಾಲೆಯ ಮಹತ್ವ ತಿಳಿಸಿ ಅವರ ಮನವೊಲಿಸಿದ್ದಾರೆ. ಅಲ್ಲದೇ, ಹಿಂದಿನ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಶಾಲೆಗೆ ಭೇಟಿ ನೀಡಿ ಶಾಲೆಯನ್ನು ಅತ್ಯುತ್ತಮವಾಗಿ ರೂಪಿಸಿರುವ ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಶಾಲೆಗೆ ‘ಉತ್ತಮ ಶಾಲೆ’ ಜಿಲ್ಲಾ ಪ್ರಶಸ್ತಿ ಕೂಡ ಬಂದಿದೆ. ಸರ್ಕಾರಿ ಶಾಲೆಯನ್ನು ಈ ರೀತಿ ಅಭಿವೃದ್ಧಿಪಡಿಸಿರುವ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು’ ಎಂದು ಒತ್ತಾಯಿಸಿದರು.

ಆದೇಶ ಹಿಂಡೆಯಲು ಆಗ್ರಹ:‘ಶಾಲೆಯ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಸರ್ಕಾರ ಆದೇಶವನ್ನು ಹಿಂಪಡೆದು ಶಿಕ್ಷಕರನ್ನು ಇಲ್ಲಿಯೇ ಮುಂದುವರೆಸಬೇಕು. ಇಲ್ಲದಿದ್ದರೇ ತೀವ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ನಾಮನಿರ್ದೇಶಿತ ಸಮಿತಿ ಅಧ್ಯಕ್ಷ ಪ್ರದೀಪ ತೆಲಸಂಗ ಸೇರಿ ಸದಸ್ಯರು ಹಾಗೂ ಪಾಲಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.