ಮೈಕ್ರೊ ಫೈನಾನ್ಸ್ ಕಿರುಕುಳ ತಡೆಯುವ ಸಂಬಂಧ ಬೆಳಗಾವಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಡಿ.ಸಿ ಮೊಹಮ್ಮದ್ ರೋಷನ್ ಹಾಗೂ ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರೊಂದಿಗೆ ಚರ್ಚಿಸಿದರು
ಬೆಳಗಾವಿ: ‘ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳು ಸಾಲ ವಸೂಲಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಶೀಘ್ರ ಸುಗ್ರೀವಾಜ್ಞೆ ಹೊರಡಿಸಲಿದೆ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಬ್ಯಾಂಕುಗಳು, ಸಹಕಾರಿ ಸಂಘಗಳು, ಮೈಕ್ರೊ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಬೇಕು.
ಫೈನಾನ್ಸ್‌ಗಳಿಂದ ಪಡೆದ ಸಾಲ ಮನ್ನಾ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆ ಇದೆ. ಹಾಗಾಗಿ, ಸಾಲ ಪಡೆಯಲು ಮುಗಿಬೀಳುತ್ತಾರೆ. ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಿದೆ. ಸಾಲಗಾರರಿಗೆ ಕಾಲಾವಕಾಶ ನೀಡಿ ಮರುಪಾವತಿ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
‘ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅವರು ಕಮಿಷನ್ ಪಡೆಯಲು ಸಬ್ಸಿಡಿ ಸಾಲ ಎಂದು ನಂಬಿಸಿ ವಂಚಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಮ ಜರುಗಿಸಿ, ಅವರಿಂದಲೇ ಸಾಲ ಮರು ಪಾವತಿಸುವ ಕೆಲಸವನ್ನು ಅಧಿಕಾರಿಗಳಿಗೆ ನೀಡಲಾಗಿದೆ’ ಎಂದರು.
‘ಮೈಕ್ರೊ ಫೈನಾನ್ಸ್‌ಗಳು ಕಿರುಕುಳ ನೀಡಿದರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆ ನಿರ್ದೇಶನ ನೀಡಲಾಗಿದೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.