ADVERTISEMENT

ಶಾಸಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಜನಪ್ರತಿನಿಧಿಗಳ ಚಿತ್ರಕ್ಕೆ ಸಗಣಿ, ಮೊಟ್ಟೆ ಎಸೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 14:16 IST
Last Updated 20 ಜುಲೈ 2019, 14:16 IST
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಸದಸ್ಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು   

ಬೆಳಗಾವಿ: ರಾಜ್ಯದಲ್ಲಿ ರಾಜಕೀಯ ವಿಷಮ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು.

‘ರಾಜ್ಯ ಹಾಗೂ ಜನರ ಅಭಿವೃದ್ಧಿಯನ್ನು ಕಡೆಗಣಿಸಿ, ಜನಪ್ರತಿನಿಧಿಗಳು ರೆಸಾರ್ಟ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿದರು. ಮೂರೂ ಪಕ್ಷಗಳ ಮುಖಂಡರ ಭಾವಚಿತ್ರಕ್ಕೆ ಸಗಣಿ ಹಾಗೂ ಮೊಟ್ಟೆ ಎಸೆದು, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಪ್ರಕಾಶ ನಾಯಕ ಮಾತನಾಡಿ, ‘ಮಹದಾಯಿ ಸೇರಿ ಇನ್ನಿತರ ಜ್ವಲಂತ ಸಮಸ್ಯೆಗಳ ಹೋರಾಟದ ಸಂದರ್ಭದಲ್ಲಿ ಯಾವುದೇ ರಾಜಕಾರಣಿಗಳು ರಾಜೀನಾಮೆ ನೀಡಲಿಲ್ಲ. ಆದರೆ, ಈಗ ತಮ್ಮ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಹಣಕ್ಕಾಗಿ ತಮ್ಮನ್ನೇ ತಾವು ಮಾರಿಕೊಳ್ಳುವ ಹಂತಕ್ಕೆ ಇಳಿದಿದ್ದಾರೆ. ಶಾಸಕರು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಅವಮಾನಿಸಿದ್ದಾರೆ’ ಎಂದು ದೂರಿದರು.

ADVERTISEMENT

ಜನಪ್ರತಿನಿಧಿಗಳ ಸ್ವಾರ್ಥಕ್ಕೆ ಜನರು ಬಲಿ:

‘ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದ್ದರೂ ಕೂಡ ಜನಪ್ರತಿನಿಧಿಗಳು ಗಮನ ಹರಿಸದೇ, ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಅಭಿವೃದ್ಧಿಯನ್ನು ಬಲಿಕೊಡುತ್ತಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸೇರಿ ಯಾರೊಬ್ಬರೂ ಕೂಡ ರಾಜ್ಯದ ಹಿತಾಸಕ್ತಿಯ ಕುರಿತು ಯೋಚನೆಯನ್ನೇ ಮಾಡುತ್ತಿಲ್ಲ. ಇವರ ಮಧ್ಯೆ ಜನರು ಬಲಿಪಶುಗಳಾಗುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಆಡಳಿತ ಯಂತ್ರ ಹದಗೆಟ್ಟಿದ್ದು, ಯಾವೊಂದು ಕಾರ್ಯಗಳೂ ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ, ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಜಯಶ್ರೀ ಗುರಣ್ಣವರ, ಜಾವೀದ ಮುಲ್ಲಾ, ನಳಿನಿ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.