ADVERTISEMENT

​ತಂದೆ–ತಾಯಿ, ಗುರು, ಭೂಮಿ ಋಣ ತೀರಿಸಿ: ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 15 ಮೇ 2025, 14:45 IST
Last Updated 15 ಮೇ 2025, 14:45 IST
ಬೈಲಹೊಂಗಲ ಮೂರುಸಾವಿರಮಠದ ಸಭಾ ಭವನದಲ್ಲಿ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗಂಗಾಧರ ಸ್ವಾಮೀಜಿ ವಿರಕ್ತಮಠ ಕನ್ನಡ ಮಾಧ್ಯಮ ಪ್ರೌಢಶಾಲೆಯ 1994-95ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ  ಗುರುವಂದನಾ ಕಾರ್ಯಕ್ರಮ ನಡೆಯಿತು 
ಬೈಲಹೊಂಗಲ ಮೂರುಸಾವಿರಮಠದ ಸಭಾ ಭವನದಲ್ಲಿ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗಂಗಾಧರ ಸ್ವಾಮೀಜಿ ವಿರಕ್ತಮಠ ಕನ್ನಡ ಮಾಧ್ಯಮ ಪ್ರೌಢಶಾಲೆಯ 1994-95ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ  ಗುರುವಂದನಾ ಕಾರ್ಯಕ್ರಮ ನಡೆಯಿತು    

ಬೈಲಹೊಂಗಲ: ‘ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ’ ಎಂದು ಶಾಖಾ ಮೂರುಸಾವಿರಮಠದ ಪೀಠಾಧಿಪತಿ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.

ಪಟ್ಟಣದ ಶಾಖಾ ಮೂರುಸಾವಿರಮಠದ ಸಭಾ ಭವನದಲ್ಲಿ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗಂಗಾಧರ ಸ್ವಾಮೀಜಿ ವಿರಕ್ತಮಠ ಕನ್ನಡ ಮಾಧ್ಯಮ ಪ್ರೌಢಶಾಲೆಯ 1994-95ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ನಡೆದ ಸ್ನೇಹ ಸಮ್ಮಿಲನ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೇವೆ. ಹಾಗಾಗಿ ಈ ಸಮಾಜದಿಂದ ಪಡೆದದ್ದನ್ನು ನಾವು ಮತ್ತೆ ಸಮಾಜಕ್ಕೆ ವಾಪಸ್ ನೀಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲೇಬೇಕು. ಸುಮಾರು 30 ವರ್ಷ ನಂತರವೂ ವಿದ್ಯೆ ಕಲಿಸಿದ ಗುರುವಿನ ಮಹತ್ವ ಅರಿತು, ಅವರಿಗೆ ವಂದಿಸುವ ಕಾರ್ಯ ಮಾದರಿಯಾಗಿದೆ. ಉಜ್ವಲ ಜೀವನ ನಿರ್ಮಿಸಬೇಕಾದರೆ ಗುರುವಿನ ಉತ್ತಮ ಮಾರ್ಗದರ್ಶನ ಅತ್ಯವಶ್ಯಕವಾಗಿದೆ’ ಎಂದರು.

ADVERTISEMENT

ನಿವೃತ್ತ ಮುಖ್ಯಶಿಕ್ಷಕ ಸಿ.ಎಸ್.ಬಾವಿಹಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ’ ಎಂದರು.

ಹಳೆಯ ವಿದ್ಯಾರ್ಥಿಗಳು 30 ವರ್ಷಗಳ ಹಿಂದಿನ ನೆನಪನ್ನು ಮೆಲುಕು ಹಾಕಿದರು. ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ರೂಪಾ ಪಾಟೀಲ, ಪಿಯುಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.