
ಬೆಳಗಾವಿ: ಯರಗಟ್ಟಿ ತಾಲ್ಲೂಕಿನ ಮಾಡಮಗೇರಿ ಪಿಡಿಒ ಜಯಗೌಡ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
‘ಮಾಡಮಗೇರಿ ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಬಾಹಿರವಾಗಿ ಇ–ಸ್ವತ್ತು ನೀಡುವಂತೆ ಪಿಡಿಒ ಜಯಗೌಡ ಪಾಟೀಲ ಅವರ ಮೇಲೆ ಒತ್ತಡ ಹೇರಲಾಗಿದೆ. ಇದಕ್ಕೆ ಒಪ್ಪದಿದ್ದಾಗ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
‘ಈ ಹಿಂದೆ ಬೆಳಗಾವಿ ತಾಲ್ಲೂಕಿನ ಅಂಬೇವಾಡ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪ ಕೊಡ್ಲಿ ಮತ್ತು ಚಿಕ್ಕೋಡಿ ತಾಲ್ಲೂಕಿನ ಚಿಕ್ಕಲವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಬಿರಾದಾರ ಅವರ ಮೇಲೂ ಮಾರಣಾಂತಿಕ ಹಲ್ಲೆ ನಡೆದಿತ್ತು. ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿದರೂ ಆರೋಪಿಗಳ ವಿರುದ್ಧ ಕ್ರಮವಾಗಿಲ್ಲ’ ಎಂದು ಆಪಾದಿಸಿದರು.
‘ಗ್ರಾಮೀಣ ಪ್ರದೇಶಗಳಲ್ಲಿ 24x7 ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಗತ್ಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.
ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರಿಗೆ ಮನವಿ ಸಲ್ಲಿಸಿದರು.
‘ಜಯಗೌಡ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ರಕ್ಷಣೆ ಒದಗಿಸುವ ಸಂಬಂಧ ಕ್ರಮ ವಹಿಸಲಿದ್ದೇವೆ’ ಎಂದು ಹೆಗ್ಗನಾಯಕ ಭರವಸೆ ನೀಡಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಹೊಳೆನ್ನವರ, ಉಸ್ಮಾನ್ ನದಾಫ್, ಶ್ರೀದೇವಿ ಮಡಿವಾಳರ, ಗೋಪಾಲ ಗುಡಸಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.