
ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಸಾಧನೆಗೈದ ಮಕ್ಕಳನ್ನು ಸತ್ಕರಿಸಲಾಯಿತು
ಬೆಳಗಾವಿ: ‘ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯಿತಿ ನಡೆಸುತ್ತಿರುವ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಸರ್ಚ್) ಪರೀಕ್ಷೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಅದನ್ನು ನಡೆಸಲು ಯೋಜಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಸಾಧನೆಗೈದವರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಪರೀಕ್ಷೆಯಿಂದ ಬೆಳಗಾವಿ ಜಿಲ್ಲೆ ಮಕ್ಕಳಿಗಷ್ಟೇ ಅನುಕೂಲವಾದರೆ ಸಾಲದು. ರಾಜ್ಯಮಟ್ಟದಲ್ಲಿ ಪ್ರತಿ ಮಗುವಿಗೆ ಅನುಕೂಲವಾಗುವ ರೀತಿ ಕ್ರಮ ವಹಿಸಲಾಗುವುದು’ ಎಂದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ, ‘ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪರೀಕ್ಷೆಗೆ ಹಾಜರಾಗಬೇಕು’ ಎಂದು ಕೋರಿದರು.
ಎಸ್.ಎಲ್.ಭೋಜೇಗೌಡ, ಶಾಸಕ ಆಸಿಫ್ ಸೇಠ್ ಮಾತನಾಡಿದರು.
ಈ ಪರೀಕ್ಷೆ ಎದುರಿಸಿದ 52 ಸಾವಿರ ವಿದ್ಯಾರ್ಥಿಗಳ ಪೈಕಿ, ಹೆಚ್ಚು ಅಂಕ ಗಳಿಸಿದ 122 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.
ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.