ADVERTISEMENT

ಗಡಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಕ್ಕೆ ಸವದಿ ಮನವಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 13:08 IST
Last Updated 13 ಮಾರ್ಚ್ 2021, 13:08 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಅಥಣಿ (ಬೆಳಗಾವಿ): ‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೋರಿದರು.

ಇಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೊಲ್ಹಾಪುರದಲ್ಲಿ ಶಿವಸೇನಾದ ಕೆಲವು ಕಾರ್ಯಕರ್ತರ ಪುಂಡಾಟಿಕೆ ಮಿತಿ ಮೀರಿದೆ. ರಾಜ್ಯದ ಬಸ್‌ಗಳ ಮೇಲೆ ಮಸಿ ಬಳಿದಿದ್ದಾರೆ. ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಇದು ಖಂಡನೀಯ’ ಎಂದರು.

‘ಅಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಲವು ಪಕ್ಷಗಳ ಜೊತೆ ಸೇರಿ ಸರ್ಕಾರ ನಡೆಸುತ್ತಿದ್ದಾರೆ. ಮಿತ್ರ ಪಕ್ಷದವರು ಅವರಿಗೆ ಸಹಕಾರ ಕೊಡುತ್ತಿಲ್ಲ. ಪರಿಣಾಮ, ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಅವರು ಅಲ್ಲಿನ ಜನರ ಗಮನ ಬೇರೆಡೆ ಸೆಳೆಯಲು ಗಡಿ ಕ್ಯಾತೆ ತೆಗೆಯುತ್ತಿದ್ದಾರೆ’ ಎಂದು ಹರಿಹಾಯ್ದರು.

ADVERTISEMENT

‘ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ಸಮಸ್ಯೆ ಉಂಟು ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಚಾರ ತಿಳಿಸಬೇಕಾಗುತ್ತದೆ’ ಎಂದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ತಿಂಗಳ ಕೊನೆಯಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ. ತೈಲ ಬೆಲೆ ಏರಿಕೆಯಾಗಲಿ ಅಥವಾ ಯಾವುದೇ ಪ್ರಕರಣದಿಂದಾಗಲಿ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದರೂ ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.